ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರಿಗೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಕರ್ನಾಟಕದಲ್ಲಿ 7ನೇ ವೇತನ ಆಯೋಗದ ಶಿಫಾರಸುಗಳ ಜಾರಿಗೆ ರಾಜ್ಯ ಸಚಿವ ಸಂಪುಟ ಸಭೆಯು ಒಪ್ಪಿಗೆ ಸೂಚಿಸಿದೆ. ಇದರಿಂದಾಗಿ ರಾಜ್ಯದ ಲಕ್ಷಾಂತರ ನೌಕರರ ವೇತನ ಜಾಸ್ತಿಯಾಗಲಿದೆ. ಆಗಸ್ಟ್ 1ರಿಂದಲೇ ಏಳನೇ ವೇತನ ಆಯೋಗದ ಜಾರಿಗೆ ಕರ್ನಾಟಕ ಸರ್ಕಾರ ತೀರ್ಮಾನ ಮಾಡಿದೆ.
ಸರ್ಕಾರಿ ನೌಕರರ ಬೇಡಿಕೆ ಈಡೇರಿಸದಿದ್ದರೆ ಜುಲೈ 29ರಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲಾಗುವುದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಾಕ್ಷರಿ ಅವರು ರಾಜ್ಯ ಸರ್ಕಾರಕ್ಕೆ ಈಗಾಗಲೇ ಎಚ್ಚರಿಕೆ ನೀಡಿದ್ದರು. ಕೆಲ ವರ್ಷಗಳಿಂದಲೂ ಏಳನೇ ವೇತನ ಆಯೋಗ ಜಾರಿಗೊಳಿಸಬೇಕು ಎಂದು ರಾಜ್ಯ ಸರ್ಕಾರಿ ನೌಕರರ ಸಂಘವು ಆಗ್ರಹಿಸುತ್ತಲೇ ಇತ್ತು.
ಇದರೊಂದಿಗೆ ರಾಜ್ಯ ಸರ್ಕಾರಿ ನೌಕರರ ಮಹತ್ವದ ಬೇಡಿಕೆ ಈಡೇರಿದಂತಾಗಿದೆ.
ಅತ್ಯಂತ ಮಹತ್ವದ ನಿರ್ಧಾರ ತೆಗೆದುಕೊಂಡ ಸಿಎಂ :
ಶೇ 27.5 ವೇತನ ಪರಿಷ್ಕರಣೆ ಮಾಡಿದ ವರದಿಯನ್ನು
ಮಾರ್ಚ್ 16 ರಂದು ಕೆ. ಸುಧಾಕರ್ ರಾವ್
ನೇತೃತ್ವದ ರಾಜ್ಯ 7ನೇ ವೇತನ ಆಯೋಗದ ಸಿಎಂ
ಸಿದ್ದರಾಮಯ್ಯನವರಿಗೆ ನೀಡಿತ್ತು. ಬಳಿಕ ಸಿಎಂ,
ಇದನ್ನು ಜಾರಿ ತರುವ ಬಗ್ಗೆ ಹಣಕಾಸು ಇಲಾಖೆಯ
ಮಾಹಿತಿ ಕೇಳಿದ್ದರು. ಇದೀಗ ಹಣಕಾಸು ಇಲಾಖೆ
ವರದಿ ಬಳಿಕ ಸಿದ್ದರಾಮಯ್ಯ ಅವರು ಆಗಸ್ಟ್ 1 ರಿಂದ
ವೇತನ ಆಯೋಗದ ಶಿಫಾರಸು ಜಾರಿಗೊಳಿಸುವ
ತೀರ್ಮಾನ ಪ್ರಕಟಿಸಿದ್ದಾರೆ.
ಇಂದು ನಡೆದ ಸಚಿವ ಸಂಪುಟದ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ.
ಈ ಹಿಂದೆ ನಡೆದ ಸಚಿವ ಸಂಪುಟ ಸಭೆಯಲ್ಲಿ 7 ನೇ ವೇತನ ಆಯೋಗ ವರದಿ ಜಾರಿ ಕುರಿತು ಸಚಿವ ಸಂಪುಟ ಸಭೆಯಲ್ಲಿ ಕೆಲ ಸಚಿವರು ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಈ ಬಗ್ಗೆ ಯಾವುದೇ ನಿರ್ಧಾರವನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೆಗೆದುಕೊಂಡಿರಲಿಲ್ಲ. ಅಲ್ಲದೇ ಸಂಪನ್ಮೂಲ ಕೊರತೆ ಹಿನ್ನೆಲೆಯಲ್ಲಿ ಹಣಕಾಸು ಇಲಾಖೆ ಸಲಹೆ ಆಧರಿಸಿ ವೇತನ ಆಯೋಗದ ಶಿಫಾರಸಿನಂತೆ ಸರ್ಕಾರಿ ನೌಕರರ ವೇತನ ಹಾಗೂ ಭತ್ಯೆಯನ್ನು ಪರಿಷ್ಕರಿಸುವ ನಿರ್ಧಾರವನ್ನು ಮುಂದೂಡುತ್ತ ಬಂದಿತ್ತು. ಆದರೆ ಇದೀಗ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ.
ಇದಲ್ಲದೆ, ರಾಜ್ಯದ ಎನ್.ಪಿ.ಎಸ್. ನೌಕರರ ಜೀವನ ನಿರ್ವಹಣೆ ಹಾಗೂ ಸಂಧ್ಯಾಕಾಲದ ಬದುಕು ಅತ್ಯಂತ ಕಷ್ಟಕರವಾಗಿರುವುದರಿಂದ ಎನ್.ಪಿ.ಎಸ್. ನೌಕರರನ್ನು ಓ.ಪಿ.ಎಸ್. ವ್ಯಾಪ್ತಿಗೆ ತರುವುದು ಸರ್ಕಾರದ ಜವಾಬ್ದಾರಿ. ಈಗಾಗಲೇ ಪಂಜಾಬ್, ರಾಜಸ್ಥಾನ, ಚತ್ತೀಸ್ ಘಡ, ಜಾರ್ಖಂಡ್ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿರುವಂತೆ ಹಾಗೂ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಕರ್ನಾಟಕದಲ್ಲೂ ಸಹ ಎನ್.ಪಿ.ಎಸ್.
ಯೋಜನೆಯನ್ನು ರದ್ದುಪಡಿಸಿ ಹಳೇ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕು ಎಂಬುದು ಮತ್ತೊಂದು ಬೇಡಿಕೆ.