ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಆರಂಭಿಸಿದ್ದ 10 ಹೊಸ ವಿಶ್ವವಿದ್ಯಾಲಯಗಳ ಪೈಕಿ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ಸಚಿವ ಸಂಪುಟ ಉಪಸಮಿತಿ ತೀರ್ಮಾನಿಸಿದೆ ಎಂದು ತಿಳಿದು ಬಂದಿದೆ.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅಧ್ಯಕ್ಷತೆಯ ಈ ಉಪಸಮಿತಿ ಸಭೆ ವಿಶ್ವವಿದ್ಯಾಲಯಗಳ ಆರ್ಥಿಕ ಸ್ಥಿತಿಗತಿಯ ಪರಿಶೀಲನೆ ಕುರಿತು ಗುರುವಾರ ಮೊದಲ ಸಭೆ ನಡೆಯಿತು. ಸಭೆಯಲ್ಲಿ ಈ ತೀರ್ಮಾನ ಕೈಗೊಂಡಿದೆ. ಉದ್ದೇಶಿತ ಜಮೀನು, ಅನುದಾನದ ಕೊರತೆ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎನ್ನಲಾಗಿದೆ.
ಬೀದರ ವಿಶ್ವವಿದ್ಯಾಲಯ ಹೊರತುಪಡಿಸಿ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ತೀರ್ಮಾನ ಕೈಗೊಳ್ಳಲಾಗಿದೆ. ಹೀಗಾಗಿ ಮಹಾರಾಣಿ ಕ್ಲಸ್ಟರ್, ನೃಪತುಂಗ ಹಾಸನ, ಚಾಮರಾಜನಗರ, ಹಾವೇರಿ, ಕೊಡಗು, ಕೊಪ್ಪಳ, ಬಾಗಲಕೋಟೆ, ಮಂಡ್ಯ ವಿಶ್ವವಿದ್ಯಾಲಯಗಳನ್ನು ಮುಚ್ಚುವ ಸಾಧ್ಯತೆಯಿದೆ.
ಬೀದರ ವಿಶ್ವವಿದ್ಯಾಲಯ 150 ಸಂಯೋಜಿತ ಕಾಲೇಜುಗಳನ್ನು ಹೊಂದಿದ್ದು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಯಾವುದೇ ವಿಶ್ವವಿದ್ಯಾಲಯ ಸುಗಮವಾಗಿ ನಡೆಯಲು ಸಂಯೋಜಿತ ಕಾಲೇಜುಗಳ ಶುಲ್ಕ ಮುಖ್ಯ. ಆದ್ದರಿಂದ ಈ ವಿಶ್ವವಿದ್ಯಾಲಯ ಉಳಿಸಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ತಿಳಿದುಬಂದಿದೆ. ವಿಶ್ವವಿದ್ಯಾಲಯಗಳ ಸ್ಥಾಪನೆಗೆ 100 ರಿಂದ 200 ಎಕರೆ ಅಗತ್ಯವಿದೆ. ವಿಶ್ವವಿದ್ಯಾಲಯಗಳಿಗೆ ಅಷ್ಟು ಪ್ರಮಾಣದ ಜಮೀನು ಲಭ್ಯವಿಲ್ಲ. ಹೊಸ ವಿಶ್ವವಿದ್ಯಾಲಯಗಳ ಕಾರ್ಯನಿರ್ವಹಣೆಗೆ ಕೋಟ್ಯಂತರ ರೂ.ಹಣ ಬೇಕಾಗುತ್ತದೆ ಎಂದು ವರದಿಯಲ್ಲಿ ಹೇಳಿತ್ತು.