ಬೆಳಗಾವಿ : ಭಾರತ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಆ.11 ರಿಂದ ಆ.15 ರವರೆಗೆ “ಹರ್ ಘರ್ ತಿರಂಗಾ” ಅಭಿಯಾನದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದ್ದಾರೆ.
ತಿರಂಗಾ ಯಾತ್ರಾ, ತಿರಂಗಾ ರ್ಯಾಲಿ, ಮ್ಯಾರಾಥಾನ್, ಸಂಗೀತ, ಪ್ರತಿಜ್ಞಾ ವಿಧಿ, ಸೆಲ್ಫಿ, ಸ್ವಾತಂತ್ರ್ಯ ಹೋರಾಟಗಾರರಿಗೆ ಸನ್ಮಾನ, ಪ್ರಬಂಧ ಮತ್ತು ಭಾಷಣ ಸ್ಪರ್ಧೆಗಳನ್ನು ವಿವಿಧ ಇಲಾಖೆಗಳ ಆಶ್ರಯದಲ್ಲಿ ನಡೆಸಲಾಗುವುದು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಪೊಲೀಸ್ ಇಲಾಖೆ, ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ರಾಣಿ ಚೆನ್ನಮ್ಮ ವಿಶ್ವವಿದ್ಯಾನಿಲಯ, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಸೇರಿದಂತೆ ವಿವಿಧ ಇಲಾಖೆಗಳು “ಹರ್ ಘರ್ ತಿರಂಗಾ” ಅಭಿಯಾನದಲ್ಲಿ ಭಾಗವಹಿಸಲಿವೆ.
ಸ್ಥಳೀಯವಾಗಿ ಆಯೋಜಿಸಲಾಗುವ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರು ಹಾಗೂ ಯುವಜನತೆ ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ಕೋರಿದ್ದಾರೆ.