ಬೆಂಗಳೂರು: ಮುಂಗಾರು ಮಳೆಯ ಆರ್ಭಟ ಶುಕ್ರವಾರ (ಜೂನ್ 21)ದಿಂದ ಮತ್ತೆ ಜೋರಾಗಲಿದೆ. ವಿಶೇಷವಾಗಿ ಕರಾವಳಿ ಜಿಲ್ಲೆಗಳು ಹಾಗೂ ಪಶ್ಚಿಮ ಘಟ್ಟದ ತಪ್ಪಲಿನ ಜಿಲ್ಲೆಗಳಿಗೆ ಒಂದು ವಾರ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ಪಶ್ಚಿಮ ಘಟ್ಟದ ಜಿಲ್ಲೆಗಳಾದ ಹಾಸನ, ಕೊಡಗು, ಚಿಕ್ಕಮಗಳೂರು, ಹಾಗೂ ಶಿವಮೊಗ್ಗ, ಮೈಸೂರು ಜಿಲ್ಲೆಗಳಿಗೆ 21 ಹಾಗೂ 22 ರಂದು ಆರೆಂಜ್ ಅಲರ್ಟ್ ಕೊಡಲಾಗಿದೆ. ಬಲವಾದ ಗಾಳಿಯ ಒಮ್ಮುಖದ ಚಲನೆಯ ಕಾರಣದಿಂದಾಗಿ ಪಶ್ಚಿಮ ಘಟ್ಟಗಳ ಸೆರಗಿನ ಕರಾವಳಿ ಪ್ರದೇಶಗಳು ಮತ್ತು ಪಕ್ಕದ ಜಿಲ್ಲೆಗಳಲ್ಲಿ ಜೂನ್ 23ರಂದು ಪ್ರತ್ಯೇಕವಾದ ಸ್ಥಳಗಳಲ್ಲಿ ವಿಪರೀತ ಮಳೆಯೊಂದಿಗೆ ಭಾರೀ ಮತ್ತು ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬಲವಾದ ಗಾಳಿ ಮತ್ತು ಭೂಕುಸಿತದ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಹಾಸನ, ಕೊಡಗು, ಚಿಕ್ಕಮಗಳೂರು, ಮೈಸೂರು ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಜೂನ್ 23 ರಂದು ಭಾರೀ ಪ್ರಮಾಣದ ಮಳೆ ಮುನ್ನೆಚ್ಚರಿಕೆ ನೀಡಲಾಗಿದ್ದು, ರೆಡ್ ಅಲರ್ಟ್ ನೀಡಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ 45-50 ಕಿಮೀ ವರೆಗೆ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ. ಆದ್ದರಿಂದ ಮೀನುಗಾರರಿಗೂ ಮುನ್ನೆಚ್ಚರಿಕೆ ನೀಡಲಾಗಿದೆ.
ಶನಿವಾರ (ಜೂನ್ 22) ರಾಜ್ಯದ 10 ಜಿಲ್ಲೆಗಳಿಗೆ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ. ಭಾನುವಾರ (ಜೂನ್ 23) ರಾಜ್ಯದ 13 ಜಿಲ್ಲೆಗಳಿಗೆ ಬಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ.