ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಆರಂಭವಾದ ಮಳೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕಳೆದೊಂದು ವಾರದಿಂದ ಮುಂದುವರಿದಿದೆ. ಇದು ಅಕ್ಟೋಬರ್ 26ರ ವರೆಗೂ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಸೋಮವಾರ 13 ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ರಾಜ್ಯದ ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಶಿವಮೊಗ್ಗ, ದಾವಣಗೆರೆ, ಬಳ್ಳಾರಿ, ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳ ನಿರ್ದಿಷ್ಟ ಸ್ಥಳಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯ ಹಲವು ಸ್ಥಳಗಳಲ್ಲಿ ಹಗುರ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಅಕ್ಟೋಬರ್ 22ರಂದು ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಬೀಳುವ ಸಾಧ್ಯತೆ ಇದೆ. ಉಳಿದಂತೆ, ಕರಾವಳಿಯ ಭಾಗಗಳಲ್ಲಿ ಹಗುರ ಮಳೆಯಾಗಲಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಅಕ್ಟೋಬರ್ 23ರಂದು ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.