ಬೆಂಗಳೂರು : ಕರ್ನಾಟಕದಲ್ಲಿ ಮತ್ತೆ ವರುಣನ ಅಬ್ಬರ ತೀವ್ರಗೊಳ್ಳುವ ಸೂಚನೆ ನೀಡಿದ್ದು, ಹವಾಮಾನ ಇಲಾಖೆ ಸುಮಾರು 20 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಕರಾವಳಿ ಭಾಗಗಳಲ್ಲಿ ಇಂದು ಭಾರೀ ಮಳೆ ಬೀಳುವ ಸಾಧ್ಯತೆ ಇದ್ದು, ದಕ್ಷಿಣ ಒಳನಾಡು ಸೇರಿದಂತೆ ಹಲವೆಡೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಬೆಂಗಳೂರಿನಲ್ಲಿಯೂ ಇಂದು ಸಂಜೆ ವೇಳೆಗೆ ಮಳೆ ಸುರಿಯುವ ಸಾಧ್ಯತೆ ಇದೆ.
ಉಡುಪಿ ಮತ್ತು ದಕ್ಷಿಣ ಕನ್ನಡ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ವ್ಯಕ್ತವಾಗಿದೆ. ಸಮುದ್ರದ ಅಲೆಗಳು ಉಗ್ರ ಸ್ವರೂಪ ತಾಳುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿಯೂ ವರುಣನ
ಆರ್ಭಟ ಕಾಣಿಸಿಕೊಳ್ಳುವ ನಿರೀಕ್ಷೆ ಇದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇದ್ದು, ಸಂಜೆ ವೇಳೆಗೆ ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆ ಇದೆ. ನಗರದಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಕರ್ನಾಟಕದ ಧಾರವಾಡ, ಹಾವೇರಿ ಮತ್ತು ಗದಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಬಾಗಲಕೋಟೆ, ಬೀದರ್ ಮತ್ತು ಕಲಬುರ್ಗಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.