ಬೆಂಗಳೂರು: ಸರ್ಕಾರಿ ಜಾಗದಲ್ಲಿ ಆರ್ಎಸ್ಎಸ್ ಸೇರಿದಂತೆ ಖಾಸಗಿ ಸಂಘಟನೆಗಳ ಚಟುವಟಿಕೆ ನಡೆಸಲು ಕಡ್ಡಾಯವಾಗಿ ಅನುಮತಿ ಪಡೆಯಬೇಕೆಂದು ಇತ್ತೀಚೆಗೆ ಸಚಿವ ಸಂಪುಟವು ನಿರ್ಧಾರ ಕೈಗೊಂಡ ನಂತರ ಈಗ ರಾಜ್ಯ ಸರ್ಕಾರವು ಈ ಬಗ್ಗೆ ಅಧಿಕೃತ ಆದೇಶವನ್ನು ಹೊರಡಿಸಿದೆ. ಈ ಕುರಿತು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದ್ದು, ತಕ್ಷಣದಿಂದಲೇ ಆದೇಶ ಜಾರಿಯಾಗಲಿದೆ.
ರಾಜ್ಯದ ಸಚಿವ ಸಂಪುಟದ ತೀರ್ಮಾನದಂತೆ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಯಾವುದೇ ಖಾಸಗಿ ಸಂಘಟನೆಯಾಗಲಿ ಅಥವಾ ಸಂಘ-ಸಂಸ್ಥೆಗಳಾಗಲಿ ಸಾರ್ವಜನಿಕ ಆಸ್ತಿ, ಸ್ಥಳದ ಮಾಲೀಕತ್ವ ಹೊಂದಿದ ಸಕ್ಷಮ ಪ್ರಾಧಿಕಾರಗಳಿಂದ ಪೂರ್ವಾನುಮತಿ ಪಡೆಯಬೇಕು ಎಂದು ತಿಳಿಸಲಾಗಿದೆ. (ಫಿಡಿಎಫ್ ನೋಡಲು Order on usage og Government propery by private organisation ಇಲ್ಲಿ ಕ್ಲಿಕ್ ಮಾಡಬಹುದು)
ಸರ್ಕಾರಿ ಶಾಲಾ-ಕಾಲೇಜುಗಳು, ಅನುದಾನಿತ ಶೈಕ್ಷಣಿಕ ಸಂಸ್ಥೆಗಳ ಆವರಣ: ಉನ್ನತ ಶಿಕ್ಷಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಅನುಮತಿ ಪಡೆಯಬೇಕು. ಉದ್ಯಾನವನ, ಮೈದಾನಗಳು ಇತರೆ ತೆರೆದ ಸ್ಥಳಗಳು : ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ನಗರಾಭಿವೃದ್ಧಿ ಇಲಾಖೆ ಅನುಮತಿ ಪಡೆಯಬೇಕು. ರಸ್ತೆಗಳು, ಸರ್ಕಾರದ ಇತರೆ ಆಸ್ತಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ, ಪೊಲೀಸ್ ಆಯುಕ್ತರು/ ಪೊಲೀಸ್ ಅಧೀಕ್ಷಕರ ಒಪ್ಪಿಗೆ ಪಡೆಯಬೇಕು ಎಂದು ಹೇಳಲಾಗಿದೆ.