ಬೆಂಗಳೂರು : ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮೂರು ದಿನ ಬಿಸಿಗಾಳಿ ಮತ್ತು ಅಧಿಕ ಆರ್ದ್ರತೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ ಉಡುಪಿ, ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಇದೆ. ಆರ್ದ್ರತೆ ಸಹ ಹೆಚ್ಚಾಗುವುದರಿಂದ ಸೆಕೆ ಅನುಭವ ಜಾಸ್ತಿ ಆಗುವ ಸಾಧ್ಯತೆ ಇದೆ. ಅರಬ್ಬಿ ಸಮುದ್ರದಲ್ಲಿ ಗಾಳಿ ತೀವ್ರಗೊಂಡಿದ್ದು, ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದೆ.
ವಿಶೇಷವಾಗಿ ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ತಾಪಮಾನವು 35 ಡಿಗ್ರಿ ಸೆಲ್ಸಿಯಸ್ಗಿಂತ ಹೆಚ್ಚಾಗುವ ನಿರೀಕ್ಷೆಯಿದೆ. ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ‘ಯೆಲ್ಲೋ ಅಲರ್ಟ್’ ಘೋಷಿಸಿದೆ. ಜನರು ಬಿಸಿಲು ಮತ್ತು ಆರ್ದ್ರತೆಯಿಂದ ತುಂಬಾ ಅಸ್ವಸ್ಥರಾಗುವ ಸಾಧ್ಯತೆ ಇದೆ. ಹೀಗಾಗಿ ಮೂರು ದಿನಗಳ ಕಾಲ ಜಿಲ್ಲೆಗಳಲ್ಲಿ ಜಾಗರೂಕತೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ.
ಮುಂದಿನ ಎರಡು ದಿನಗಳ ಕಾಲ ಕರಾವಳಿ ಭಾಗದಲ್ಲಿ ತೀವ್ರ ಉಷ್ಣಾಂಶ ದಾಖಲಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂನೆ ನೀಡಿದೆ
ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಹವಾಮಾನ ವೈಪರೀತ್ಯ ಉಂಟಾಗಿದೆ.
ಬೆಂಗಳೂರು ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ್, ಕಲಬುರಗಿ ಮತ್ತು ವಿಜಯಪುರ ಸೇರಿದಂತೆ ಹಲವು ಭಾಗಗಳಲ್ಲಿ ಶುಷ್ಕ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ಕೆಲವು ಕಡೆ ಅಲ್ಪ ಪ್ರಮಾಣದ ಮಳೆಯಾಗುವ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಮೈಸೂರು, ಕೊಡಗು ಮತ್ತು ಚಿಕ್ಕಮಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ವರದಿ ತಿಳಿಸಿದೆ. .


