ಬೆಂಗಳೂರು :
ರಾಜ್ಯಾದ್ಯಂತ ಸ್ಥಿರಾಸ್ತಿಗಳ ಪರಿಷ್ಕೃತ ನೂತನ “ಮಾರ್ಗಸೂಚಿ ದರ” (ಗೈಡೆನ್ಸ್ ವ್ಯಾಲ್ಯೂ) ಅಕ್ಟೋಬರ್ 1 ರಿಂದ ಜಾರಿಯಾಗಲಿದೆ ಎಂದು ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ.
ವಿಕಾಸಸೌಧದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೋಂದಣಿ ಇಲಾಖೆ ಕಾನೂನಿನ ಪ್ರಕಾರ ಪ್ರತಿ ವರ್ಷ ಮಾರ್ಗಸೂಚಿ ದರ ಪರಿಷ್ಕರಣೆಯಾಗಬೇಕು. ಆದರೆ, ಐದು ವರ್ಷದಿಂದ ಮಾರ್ಗಸೂಚಿ ದರ ಪರಿಷ್ಕರಣೆಯಾಗಿರಲಿಲ್ಲ ಎಂದು ತಿಳಿಸಿದರು.
ಅಕ್ಟೋಬರ್ 1 ರಿಂದ ನೂತನ ಮಾರ್ಗಸೂಚಿ ದರ ಜಾರಿಯಾಗಲಿದೆ. ಮಾರುಕಟ್ಟೆ ದರಕ್ಕೂ ಮಾರ್ಗಸೂಚಿ ದರಕ್ಕೂ ಸಾಮ್ಯತೆ ಇರುವ ಪ್ರದೇಶಗಳಲ್ಲಿ ಮಾರ್ಗಸೂಚಿ ದರವನ್ನು ಶೇ.10 ರಷ್ಟು ಏರಿಕೆ ಮಾಡಲಾಗಿದೆ ಎಂದು ಹೇಳಿದರು.
ಮಾರ್ಗಸೂಚಿ ದರಕ್ಕಿಂತ ಮಾರುಕಟ್ಟೆ ದರ 200 ಪಟ್ಟು ಹೆಚ್ಚಿರುವ ಪ್ರದೇಶಗಳಲ್ಲಿ ಪರಿಷ್ಕೃತ ದರವನ್ನು ಶೇ.20 ರಿಂದ ಶೇ.25 ರಷ್ಟು ಹೆಚ್ಚಿಸಲಾಗಿದೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಭಾಗದಲ್ಲಿ ಮಾರ್ಗಸೂಚಿ ದರಕ್ಕಿಂತ ಮಾರುಕಟ್ಟೆ ದರ 500 ಪಟ್ಟು ಹೆಚ್ಚಿದೆ. ಇಂತಹ ಪ್ರದೇಶಗಳಲ್ಲಿ ನೂತನ ಮಾರ್ಗಸೂಚಿ ದರವನ್ನು ಶೇ. 50ರಷ್ಟು ಹೆಚ್ಚಿಸಲಾಗಿದೆ” ಎಂದರು.
ಮಾರುಕಟ್ಟೆ ದರಕ್ಕಿಂತ ಮಾರ್ಗಸೂಚಿ ದರ ಹೆಚ್ಚಾಗಿದ್ದರೆ, ಅಂತಹ ಭಾಗದಲ್ಲಿ ಮಾರ್ಗಸೂಚಿ ದರವನ್ನು ಮತ್ತಷ್ಟು ಕಡಿಮೆ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಮಾರ್ಗಸೂಚಿ ದರ ಶೇ.0ದಿಂದ ಶೇ.50ರ ವರೆಗೆ ಪ್ರತಿಯೊಂದು ಪ್ರದೇಶಕ್ಕೂ ಸಂಬಂಧಿಸಿದಂತೆ “ಕೇಸ್ ಬೈ ಕೇಸ್” ಹೆಚ್ಚಾಗಲಿದೆ. ಮೊದಲ ಹಂತವಾಗಿ ಬೆಂಗಳೂರಿನಲ್ಲಿ ಅಕ್ಟೋಬರ್ 1ರಿಂದ ಪರಿಷ್ಕೃತ ದರ ಜಾರಿಯಾಗಲಿದೆ. ಉಳಿದಂತೆ ಪ್ರತಿ ಜಿಲ್ಲೆಯಲ್ಲಿ ಅಲ್ಲಿನ “ಉಪ ಸಮಿತಿ (ಸಬ್ ಕಮಿಟಿ)” ಚರ್ಚಿಸಿ ನೂತನ ಮಾರ್ಗಸೂಚಿ ದರವನ್ನು ಹಂತಹಂತವಾಗಿ ಜಾರಿಗೊಳಿಸಲಾಗುತ್ತದೆ. ಒಟ್ಟಾರೆಯಾಗಿ ಪರಿಷ್ಕೃತ ಮಾರ್ಗಸೂಚಿ ದರ ಸರಾಸರಿ ಶೇ.25 ರಿಂದ ಶೇ.30 ರಷ್ಟು ಹೆಚ್ಚಾಗಲಿದೆ ಎಂದು ತಿಳಿಸಿದರು.
ಮಾರ್ಗಸೂಚಿ ದರ ಪರಿಷ್ಕರಣೆಯಲ್ಲಿ ಯಾರಿಗಾದರೂ ತಕರಾರು ಇದ್ದರೆ, ಅದನ್ನೂ ಸಲ್ಲಿಸಬಹುದು. ಅಧಿಕಾರಿಗಳು ತಕರಾರುಗಳನ್ನೂ ಗಮನಿಸಿ ಹೊಸ ಮಾರ್ಗಸೂಚಿ ದರವನ್ನು ಜಾರಿಗೊಳಿಸುತ್ತಾರೆ” ಎಂದು ತಿಳಿಸಿದರು.
ಕಾವೇರಿ-2 ತಂತ್ರಾಂಶದ ಬಳಕೆಯ ನಂತರ ಆಸ್ತಿ ನೋಂದಣಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಕಾವೇರಿ-2 ತಂತ್ರಾಂಶ ಜಾರಿಯಾದ ಸಂದರ್ಭದಲ್ಲಿ ಸಣ್ಣಪುಟ್ಟ ನ್ಯೂನತೆಗಳು ಇದ್ದದ್ದು ನಿಜ. ಆದರೆ, ಪ್ರಸ್ತುತ ಬಹುತೇಕ ನ್ಯೂನತೆಗಳನ್ನೂ ಸರಿಪಡಿಸಲಾಗಿದೆ. ಹೀಗಾಗಿ ರಾಜ್ಯದಲ್ಲಿ ಪ್ರತಿದಿನ ಸುಮಾರು 10 ರಿಂದ 13 ಸಾವಿರ ಆಸ್ತಿ ನೋಂದಣಿಗಳಾಗುತ್ತಿವೆ. ಕೆಲ ದಿನಗಳಲ್ಲಿ ಒಂದೇ ಕಚೇರಿಯಲ್ಲಿ 140 ಕ್ಕೂ ಅಧಿಕ ರಿಜಿಸ್ಟ್ರೇಷನ್ ಆಗಿದ್ದೂ ಇದೆ. ಕಳೆದ ವರ್ಷಕ್ಕಿಂತ ಈ ಸೆಪ್ಟೆಂಬರ್ ನಲ್ಲಿ ಈಗಾಗಲೇ 800 ಕೋಟಿ ರೂ.ಗಳಿಗೂ ಹೆಚ್ಚು ಆದಾಯ ಸರ್ಕಾರಕ್ಕೆ ಬಂದಿದೆ ಎಂದರು.