ಬೆಂಗಳೂರು:
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುವ ವಿಧಾನಮಂಡಲ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಕುರಿತು ಹೆಚ್ಚಿನ ಚರ್ಚೆಯಾಗಿ, ಪರಿಹಾರ ಕಂಡುಕೊಳ್ಳುವ ಸಲುವಾಗಿ ಅಧಿವೇಶನದ ಎರಡು ಮತ್ತು ಮೂರನೇ ದಿನಗಳನ್ನು ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಚರ್ಚೆಗೆ ಮೀಸಲಿಡಲಾಗುವುದು ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.
ವಿಧಾನ ಸೌಧದಲ್ಲಿ ಮಾತನಾಡಿದ ಅವರು, ಪ್ರತಿ ಬಾರಿ ಬೆಳಗಾವಿ ಅಧಿವೇಶನ ನಡೆದಾಗಲೂ ಉತ್ತರ ಕರ್ನಾಟಕ ಭಾಗಕ್ಕೆ ಅನುಕೂಲವಾಗುತ್ತದೆ ಎಂಬ ಭಾವನೆಯಿದೆ. ಆದರೆ, ಸಾಕಷ್ಟು ಸಂದರ್ಭದಲ್ಲಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಚರ್ಚೆಯೇ ನಡೆಯುವುದಿಲ್ಲ. ಆದ್ದರಿಂದ ಈ ಬಾರಿಯ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಚರ್ಚೆಗಾಗಿ 2 ದಿನ ಮೀಸಲಿಡಲಾಗುವುದು. ಅಧಿವೇಶನದ ಸಂದರ್ಭದಲ್ಲಿ ಪ್ರತಿಭಟನೆ ನಡೆಸುವ ಉದ್ದೇಶ ಹೊಂದಿರುವ ಸಂಘಟನೆಗಳನ್ನು ಕರೆದು ಈಗಲೇ ಮಾತುಕತೆ ನಡೆಸುವಂತೆ ಪತ್ರ ಬರೆದಿದ್ದೇನೆ ಎಂದರು.