ಬೆಂಗಳೂರು: ಇನ್ನೂ ಒಂದೆರಡು ದಿನ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಬಲವಾದ ಗಾಳಿ ಬೀಸಲಿದೆ. ಮತ್ತು ಬಲವಾದ ಗಾಳಿಯೊಂದಿಗೆ ಮಧ್ಯಮ ಮಳೆಯಾಗಲಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗಲಿದ್ದು, ಗಂಟೆಗೆ 50-60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಅದು ತಿಳಿಸಿದೆ. ಹೀಗಾಗಿ ಕಾರವಾರ, ಮಂಗಳೂರು, ಪಣಂಬೂರು, ಹೊನ್ನಾವರ, ಭಟ್ಕಳ, ಗಂಗೊಳ್ಳಿ, ಮಲ್ಪೆ ಮೊದಲಾದ ಬಂದರು ಮತ್ತು ಮೀನುಗಾರರಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಮಳೆಯ ಅಬ್ಬರ ಸ್ವಲ್ಪ ಕಡಿಮೆಯಾಗಿದೆ.
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬಲವಾದ ಗಾಳಿ ಬೀಸುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯುವ ಬಗ್ಗೆ ಎಚ್ಚರಿಕೆ ನೀಡಲಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು ಮುಂತಾದ ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ.
ಇಲಾಖೆಯ ದತ್ತಾಂಶದ ಪ್ರಕಾರ, ಜುಲೈ 29 ರವರೆಗೆ ಕರ್ನಾಟಕದ ಕರಾವಳಿ ಭಾಗದ ಎಲ್ಲಾ ಪ್ರದೇಶಗಳಲ್ಲಿ ಹೆಚ್ಚಿನ ಮಳೆಯಾಗಿದ್ದರೆ, ಉತ್ತರ ಒಳನಾಡಿನ ಹಲವು ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯ ಕೊರತೆ ಕಂಡುಬಂದಿದೆ ಎಂದು ತಿಳಿದುಬಂದಿದೆ.