ಅಥಣಿ :
ಜಿಲ್ಲಾಡಳಿತ, ಜಿ.ಪಂ., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲೂಕು ಆಡಳಿತ, ತಾಲೂಕು ಪಂಚಾಯಿತಿ ಹಾಗೂ ಪುರಸಭೆ ಅಥಣಿ ಇವರ ಸಂಯುಕ್ತಾಶ್ರಯದಲ್ಲಿ ಇಂದು ಪಟ್ಟಣದ ಗಚ್ಚಿನಮಠದ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ರಾಜ್ಯದಲ್ಲಿರುವ ಮಹಿಳೆಯರ ಆರ್ಥಿಕ ಸಬಲೀಕರಣದ ಉದ್ದೇಶದಿಂದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ತಲಾ 2000 ರೂ. ನೀಡುವ ಗೃಹಲಕ್ಷ್ಮೀ ಯೋಜನೆಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾಜಿ ಉಪಮುಖ್ಯಮಂತ್ರಿ, ಅಥಣಿ ಮತಕ್ಷೇತ್ರದ ಶಾಸಕ ಲಕ್ಷ್ಮಣ ಸಂ. ಸವದಿಯವರ ಪುತ್ರ, ಕಾಂಗ್ರೆಸ್ ಪಕ್ಷದ ಯುವ ನಾಯಕ ಚಿದಾನಂದ ಲ. ಸವದಿ ಪಾಲ್ಗೊಂಡು ಮಾತನಾಡಿದರು.
ರಾಜ್ಯ ಕಾಂಗ್ರೆಸ್ ಸರ್ಕಾರವು ರಾಜ್ಯ ವಿಧಾನಸಭೆ ಚುನಾವಣೆ ಪೂರ್ವದಲ್ಲಿ ಜನ ಕಲ್ಯಾಣಕ್ಕಾಗಿ ಘೋಷಿಸಿದ್ದ ಗ್ಯಾರಂಟಿ ಯೋಜನೆಗಳನ್ನು ಹಂತ ಹಂತವಾಗಿ ಅನುಷ್ಠಾನಗೊಳಿಸುವ ಮೂಲಕ ನುಡಿದಂತೆ ನಡೆದು, ರಾಜ್ಯದ ಜನರ ಮನಗೆದ್ದಿದೆ. ಗೃಹಲಕ್ಷ್ಮೀ ಯೋಜನೆಯಿಂದ ಕುಟುಂಬದ ಯಜಮಾನಿ ಖಾತೆಗೆ ಪ್ರತಿ ತಿಂಗಳು 2000 ರೂ. ಜಮೆಯಾಗಲಿದ್ದು, ಇದರಿಂದ ಮಹಿಳೆಯರಿಗೆ ಕುಟುಂಬ ನಿರ್ವಹಣೆಗೆ ಅನುಕೂಲವಾಗಲಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ತಾಲೂಕುಮಟ್ಟದ ಅಧಿಕಾರಿಗಳು, ಪುರಸಭೆ ಸದಸ್ಯರು, ವಿವಿಧ ಚುನಾಯಿತ ಪ್ರತಿನಿಧಿಗಳು, ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು, ಮಹಿಳೆಯರು, ಸಾರ್ವಜನಿಕರು ಪಾಲ್ಗೊಂಡಿದ್ದರು.