ನವದೆಹಲಿ: ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಅವರು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕೆ. ರಾಮಮೋಹನ ನಾಯ್ಡು ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಿ, ಬೆಳಗಾವಿ ವಿಮಾನ ನಿಲ್ದಾಣದಿಂದ ದೇಶದ ವಿವಿಧ ಪ್ರಮುಖ ನಗರಗಳಿಗೆ ನೇರ ವಿಮಾನಯಾನ ಸೇವೆ ಆರಂಭಿಸುವ ಕುರಿತು ಚರ್ಚಿಸಿ ಮನವಿ ಸಲ್ಲಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಶೆಟ್ಟರ್ ಅವರು, ಇಂಡಿಗೋ ಮತ್ತು ಏರ್ ಇಂಡಿಯಾ ಎಕ್ಸ್ಪ್ರೆಸ್ ಸಂಸ್ಥೆಗಳ ಮೂಲಕ ಮುಂಬೈ, ಚೆನ್ನೈ, ಸೂರತ್, ಪುಣೆ ಸೇರಿದಂತೆ ಹಲವು ಪ್ರಮುಖ ನಗರಗಳಿಗೆ ವಿಮಾನ ಸೇವೆ ಆರಂಭಿಸುವಂತೆ ಕೋರಲಾಗಿದೆ ಎಂದು ತಿಳಿಸಿದ್ದಾರೆ.
ಬೆಳಗಾವಿ ನಗರವು ಕೈಗಾರಿಕೆ, ವ್ಯಾಪಾರ ಮತ್ತು ಶಿಕ್ಷಣ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ವೇಗವಾಗಿ ಬೆಳೆಯುತ್ತಿರುವ ನಗರವಾಗಿದ್ದು, ವಿಮಾನ ಸಂಪರ್ಕದ ಕೊರತೆ ಉದ್ಯಮದಾರರು ಹಾಗೂ ಸಾರ್ವಜನಿಕರಿಗೆ ದೊಡ್ಡ ತೊಂದರೆಯಾಗಿ ಪರಿಣಮಿಸಿದೆ. ಬೆಳಗಾವಿ ವಿಮಾನ ನಿಲ್ದಾಣವು ಕೇಂದ್ರ ಸರ್ಕಾರದ ಉಡಾನ್ ಯೋಜನೆಯ ಅಡಿಯಲ್ಲಿ ಆಯ್ಕೆಯಾಗಿದ್ದರೂ, ಯೋಜನೆಯ ಅವಧಿ ಮುಕ್ತಾಯವಾದ ನಂತರ ಅನೇಕ ಮಾರ್ಗಗಳ ವಿಮಾನ ಸೇವೆ ರದ್ದುಪಡಿಸಲಾಗಿದೆ. ಇದರಿಂದಾಗಿ ವ್ಯಾಪಾರ, ಪ್ರವಾಸ ಮತ್ತು ಹೂಡಿಕೆ ಚಟುವಟಿಕೆಗಳಿಗೆ ಅಡ್ಡಿಯಾಗುತ್ತಿದೆ ಎಂದು ಶೆಟ್ಟರ್ ಅವರು ಗಮನ ಸೆಳೆದಿದ್ದಾರೆ.
ಈ ಹಿನ್ನೆಲೆಯಲ್ಲಿ ಇಂಡಿಗೋ ಮತ್ತು ಏರ್ ಇಂಡಿಯಾ ಎಕ್ಸ್ಪ್ರೆಸ್ ಸಂಸ್ಥೆಗಳಿಗೆ ಅಗತ್ಯ ನಿರ್ದೇಶನ ನೀಡಿ, ಬೆಳಗಾವಿ ಮಾರ್ಗದಲ್ಲಿ ಮತ್ತೆ ವಿಮಾನ ಸೇವೆ ಪುನರಾರಂಭಿಸುವಂತೆ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಅದರೊಂದಿಗೆ ರಾಜ್ಯದ ಪ್ರಮುಖ ವಿಮಾನ ನಿಲ್ದಾಣಗಳಿಗೆ ಮಹತ್ವದ ವ್ಯಕ್ತಿಗಳ ಹೆಸರನ್ನು ಮರುನಾಮಕರಣ ಮಾಡುವ ಕುರಿತು ರಾಜ್ಯ ಸರ್ಕಾರ ಕಳುಹಿಸಿರುವ ಪ್ರಸ್ತಾವನೆಯನ್ನು ಶೀಘ್ರವಾಗಿ ಅನುಮೋದಿಸುವಂತೆ ಸಹ ಶೆಟ್ಟರ್ ಅವರು ಮನವಿ ಮಾಡಿದ್ದಾರೆ.
ಬೆಳಗಾವಿ ವಿಮಾನ ನಿಲ್ದಾಣ – ಕಿತ್ತೂರ ರಾಣಿ ಚನ್ನಮ್ಮ ಏರ್ಪೋರ್ಟ್
ಹುಬ್ಬಳ್ಳಿ ವಿಮಾನ ನಿಲ್ದಾಣ – ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಏರ್ಪೋರ್ಟ್
ಶಿವಮೊಗ್ಗ ವಿಮಾನ ನಿಲ್ದಾಣ – ರಾಷ್ಟ್ರಕವಿ ಡಾ. ಕೆ.ವಿ. ಪುಟ್ಟಪ್ಪ (ಕುವೆಂಪು) ಏರ್ಪೋರ್ಟ್
ವಿಜಯಪುರ ವಿಮಾನ ನಿಲ್ದಾಣ – ಜಗಜ್ಯೋತಿ ಬಸವೇಶ್ವರ ಏರ್ಪೋರ್ಟ್
ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಕೇಂದ್ರ ಸರ್ಕಾರ ಶೀಘ್ರ ಒಪ್ಪಿಗೆ ನೀಡಬೇಕು ಎಂದು ಕೋರಲಾಗಿದೆ.
ಈ ವಿಷಯಕ್ಕೆ ಸ್ಪಂದಿಸಿದ ಕೇಂದ್ರ ವಿಮಾನಯಾನ ಸಚಿವ ಕೆ. ರಾಮಮೋಹನ ನಾಯ್ಡು ಅವರು, ಪ್ರಸ್ತಾಪಿತ ವಿಷಯಗಳ ಕುರಿತು ಆದಷ್ಟು ಶೀಘ್ರ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ಶೆಟ್ಟರ್ ತಿಳಿಸಿದ್ದಾರೆ.


