ಬೆಳಗಾವಿ :ಕೇಂದ್ರದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ನೇತೃತ್ವದಲ್ಲಿ ಎನ್ಡಿಎ ಸರಕಾರ ಅಧಿಕಾರಕ್ಕೆ ಬರುವುದು ಬಹುತೇಕ ಖಚಿತವಾಗಿದೆ. ಬೆಳಗಾವಿ ಲೋಕಸಭಾ ಮತಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಬಹುದೊಡ್ಡ ಗೆಲುವು ಕಂಡಿರುವ ಜಗದೀಶ್ ಶೆಟ್ಟರ್ ಅವರು ಈ ಹಿಂದೆ ಕರ್ನಾಟಕದ ಮುಖ್ಯಮಂತ್ರಿಯಾಗಿ ಅತ್ಯಂತ ಪ್ರಭಾವಯುತ ಸ್ಥಾನ ಪಡೆದಿದ್ದರು. ಹೀಗಾಗಿ ಅವರಿಗೆ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರದಲ್ಲಿ ಸಚಿವ ಸ್ಥಾನ ಸಿಗುವುದು ಬಹುತೇಕ ಖಚಿತವಾಗಿದೆ.
ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗ್ರಹ ಸಚಿವ ಅಮಿತ್ ಷಾ ಅವರ ಕೃಪಾಕಟಾಕ್ಷಕ್ಕೆ ಪಾತ್ರರಾಗಿರುವ ಜಗದೀಶ್ ಶೆಟ್ಟರ್ ಅವರು ಅತ್ಯಂತ ಕಠಿಣ ಪರಿಸ್ಥಿತಿಯಲ್ಲಿ ಈ ಬಾರಿ ಬೆಳಗಾವಿಯಲ್ಲಿ ಬಿಜೆಪಿಯನ್ನು ಗೆಲುವಿನ ದಡಕ್ಕೆ ತೆಗೆದುಕೊಂಡು ಹೋಗಿದ್ದಾರೆ. ಹೀಗಾಗಿ ಅವರಿಗೆ ಸಚಿವ ಸ್ಥಾನ ಸಿಗುವುದರಲ್ಲಿ ಯಾವ ಅನುಮಾನವೂ ಇಲ್ಲ. ಅದರಲ್ಲೂ ಜಗದೀಶ್ ಶೆಟ್ಟರ್ ಅವರಿಗೆ ಅಚ್ಚುಮೆಚ್ಚಿನ ಗ್ರಾಮೀಣಾಭಿವೃದ್ಧಿ ಇಲ್ಲವೇ ಕೈಗಾರಿಕೆ ಮತ್ತು ರೈಲ್ವೆ ಖಾತೆ ಸಿಗುವುದರಲ್ಲಿ ಸಂದೇಹವಿಲ್ಲ.
ಈ ಹಿಂದೆ ಬೆಳಗಾವಿ ಲೋಕಸಭಾ ಮತಕ್ಷೇತ್ರದಲ್ಲಿ ಸಂಸದರಾಗಿ ಕೆಲಸ ಮಾಡಿ ನಂತರ ಕೇಂದ್ರ ರೈಲ್ವೆ ಖಾತೆ ಸಚಿವರಾಗಿ ಕೆಲಸ ಮಾಡಿದ್ದ ಸುರೇಶ ಅಂಗಡಿ ಅವರು ಅಲ್ಪಾವಧಿಯಲ್ಲಿ ಸಾಕಷ್ಟು ಹೆಸರು ಮಾಡಿ ಬೆಳಗಾವಿಯನ್ನು ಅಭಿವೃದ್ಧಿ ಪಥದತ್ತ ಮುನ್ನಡೆಸಿದ್ದರು. ಇದೀಗ ಅವರ ಹಾದಿಯಲ್ಲಿ ಜಗದೀಶ್ ಶೆಟ್ಟರ್ ಅವರು ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಸಾಕಷ್ಟು ಅನುದಾನ ತಂದು ಕೊಡುವ ಮೂಲಕ ಬೆಳಗಾವಿಯನ್ನು ಅಭಿವೃದ್ಧಿ ಪಡಿಸಬೇಕಾಗಿದೆ.
ಒಟ್ಟಾರೆ, ಬೆಳಗಾವಿಯಿಂದ ಸ್ಪರ್ಧಿಸಿರುವ ಜಗದೀಶ್ ಶೆಟ್ಟರ್ ಅವರು ಅವರಿಗೆ ಈ ಬಾರಿ ಕೇಂದ್ರದಲ್ಲಿ ಸಚಿವ ಸ್ಥಾನ ಸಿಗುವ ಮೂಲಕ ಮುಂದಿನ ದಿನಗಳಲ್ಲಿ ಈ ಭಾಗಕ್ಕೆ ಹೆಚ್ಚು ಹೆಚ್ಚು ಅನುದಾನ ಹಾಗೂ ಅಭಿವೃದ್ಧಿ ತಂದು ಕೊಡುವ ನಿಟ್ಟಿನಲ್ಲಿ ಯಾವ ರೀತಿಯಲ್ಲಿ ಕೆಲಸ ಮಾಡುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ.