ಬೆಂಗಳೂರು : ಕರ್ನಾಟಕದಲ್ಲಿ ತಯಾರಾಗುವ ಎಲ್ಲ ಉತ್ಪನ್ನಗಳ ಮೇಲೆ ಹೆಸರು ಹಾಗೂ ಅವುಗಳ ಬಳಕೆಯ ಕುರಿತಾದ ನಿರ್ದೇಶನಗಳನ್ನು ಕನ್ನಡದಲ್ಲಿಯೂ ಮುದ್ರಿಸಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದಾರೆ. ಭಾಷೆಯು ನೆಲದ ಸಂಸ್ಕೃತಿ, ಸಂಪ್ರದಾಯ ಮತ್ತು ಮೌಲ್ಯಗಳನ್ನು ಪ್ರತಿಬಿಂಬಿಸುತ್ತದೆ. ಒಂದು ಭಾಷೆ ಬೆಳವಣಿಗೆಯಾಗಬೇಕಾದರೆ ಆ ನೆಲದಲ್ಲಿನ ಉತ್ಪಾದನೆ, ಮಾರುಕಟ್ಟೆ ವ್ಯವಹಾರಗಳು ಸ್ಥಳೀಯ ಭಾಷೆಯಲ್ಲಿ ಇರಬೇಕು. ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗಾಗಿ ಮತ್ತು ಕನ್ನಡಿಗರಿಗೆ ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಉತ್ತಮ ಅವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ಸರ್ಕಾರವು ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022 ಅನ್ನು 12-03-2024 ರಿಂದ ಜಾರಿಗೆ ತಂದಿದೆ. ಈ ಅಧಿನಿಯಮದ ಕಲಂ 17 (7)ರಲ್ಲಿ ಸಾಧ್ಯವಾದಷ್ಟು ಮಟ್ಟಿಗೆ ರಾಜ್ಯದೊಳಗೆ ತಯಾರಿಸಿದ ಮತ್ತು ಮಾರಾಟವಾಗುವ ಎಲ್ಲಾ ಕೈಗಾರಿಕಾ ಮತ್ತು ಇತರೆ ಗ್ರಾಹಕ ಉತ್ಪನ್ನಗಳ ಹೆಸರು ಮತ್ತು ಅವುಗಳ ಬಳಕೆಯ ಕುರಿತಾದ ನಿರ್ದೇಶನಗಳು ಇದ್ದಲ್ಲಿ ಯಾವುದೇ ಇತರ ಭಾಷೆಯ ಜೊತೆಗೆ ಕನ್ನಡದಲ್ಲಿ ಇರತಕ್ಕದ್ದು ಎಂದು ತಿಳಿಸಲಾಗಿದೆ ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.
ಪ್ರಮುಖ ಸುದ್ದಿ :- ಮಾ.1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ
ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ತಯಾರಾಗುವ ಎಲ್ಲಾ ಕೈಗಾರಿಕೆ ಮತ್ತು ಗ್ರಾಹಕ ಉತ್ಪನ್ನಗಳ ಮೇಲೆ ಹೆಸರು ಮತ್ತು ಅವುಗಳ ಬಳಕೆಯ ಕುರಿತಾದ ನಿರ್ದೇಶನಗಳನ್ನು ಇತರ ಭಾಷೆಗಳ ಜೊತೆಗೆ ಕನ್ನಡದಲ್ಲಿಯೂ ಕಡ್ಡಾಯವಾಗಿ ಮುದ್ರಿಸಬೇಕು ಎಂದು ಸೂಚಿಸಲಾಗಿದೆ. ಹಾಗೂ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022ರ ಕಲಂ 9ರಡಿ ಗೊತ್ತುಪಡಿಸಿದ ಜಾರಿ ಪ್ರಾಧಿಕಾರಗಳು ಈ ಸೂಚನೆಗಳನ್ನು ಸರ್ಕಾರಿ ಮತ್ತು ಖಾಸಗಿ ಕ್ಷೇತ್ರದ ಎಲ್ಲಾ ಕೈಗಾರಿಕಾ ಮತ್ತು ಗ್ರಾಹಕ ವಸ್ತುಗಳ ಉತ್ಪನ್ನದಾರರು ಕಟ್ಟು ನಿಟ್ಟಾಗಿ ಅನುಷ್ಠಾನಗೊಳಿಸುವ ಬಗ್ಗೆ ಮೇಲ್ವಿಚಾರಣೆ ಮಾಡುವಂತೆ ಸೂಚಿಸಲಾಗಿದೆ.
ಕರ್ನಾಟಕ ರಕ್ಷಣಾ ವೇದಿಕೆ ಸ್ವಾಗತ…
ʼನಮ್ಮ ಮೂರು ಪ್ರಮುಖ ಬೇಡಿಕೆಗಳ ಪೈಕಿ ಒಂದನ್ನು ರಾಜ್ಯ ಸರ್ಕಾರ ಈಡೇರಿಸುವ ಪ್ರಯತ್ನ ಮಾಡಿದೆ. ಇದಕ್ಕಾಗಿ ಸುತ್ತೋಲೆ ಹೊರಡಿಸಿದೆ. ಸುತ್ತೋಲೆಯ ಪ್ರಕಾರ ಇನ್ನು ಮುಂದೆ ಕರ್ನಾಟಕದಲ್ಲಿ ಮಾರಾಟವಾಗುವ ಉತ್ಪನ್ನಗಳ ಮೇಲೆ ಕನ್ನಡದಲ್ಲಿ ಹೆಸರು ವಿವರಗಳನ್ನು ಬರೆಯಬೇಕಾಗುತ್ತದೆ. ಮಹಾಸಂಘರ್ಷ ಯಾತ್ರೆಯ ಮೊದಲ ಬೇಡಿಕೆ ಈಗ ಈಡೇರಿದೆ. ಇದಕ್ಕಾಗಿ ರಾಜ್ಯ ಸರ್ಕಾರಕ್ಕೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂದನೆಗಳುʼ ಎಂದು ಕರವೇ ಅಧ್ಯಕ್ಷ ನಾರಾಯಣ ಗೌಡ ತಿಳಿಸಿದ್ದಾರೆ.
ಈ ಸುತ್ತೋಲೆ ಕೇವಲ ಸುತ್ತೋಲೆಯಾಗಿ ಉಳಿಯಬಾರದು. ಕಾಲಮಿತಿಯೊಳಗೆ ಇದು ಜಾರಿಯಾಗುವಂತೆ ಅಧಿಕಾರಿಗಳು ನೋಡಿಕೊಳ್ಳಬೇಕು. ಸಂಬಂಧಪಟ್ಟ ಅಧಿಕಾರಿಗಳು ಉತ್ಪನ್ನಗಳ ತಯಾರಕರಿಗೆ ಸುತ್ತೋಲೆಯ ಕುರಿತು ಮಾಹಿತಿ ನೀಡಿ, ಕನ್ನಡದಲ್ಲಿ ಮುದ್ರಿಸಬೇಕೆಂದು ತಾಕೀತು ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಕರ್ನಾಟಕ ರಕ್ಷಣಾ ವೇದಿಕೆ ಹಮ್ಮಿಕೊಂಡಿರುವ “ಮಹಾಸಂಘರ್ಷ ಯಾತ್ರೆ”ಯ ಇನ್ನೆರಡು ಬೇಡಿಕೆಗಳನ್ನೂ ಸರ್ಕಾರ ಈಡೇರಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ಅಗತ್ಯ ಬಿದ್ದಲ್ಲಿ ಸೂಕ್ತ ಕಾಯ್ದೆಯನ್ನು ರೂಪಿಸಿ, ಕನ್ನಡಿಗರ ಕೈಗೆ ಉದ್ಯಮ ಮತ್ತು ಉದ್ಯೋಗಗಳು ದೊರೆಯುವಂತೆ ಮಾಡಬೇಕು ಎಂದು ಒತ್ತಾಯಿಸುತ್ತೇನೆ ಎಂದು ನಾರಾಯಣಗೌಡ ಹೇಳಿದ್ದಾರೆ.