ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಸಿಇಟಿ 2025ರ ವೇಳಾಪಟ್ಟಿ ಪ್ರಕಟಿಸಿದೆ. ಸಿಇಟಿ ಪರೀಕ್ಷೆಯು ಏಪ್ರಿಲ್ 16 (ಬುಧವಾರ) ಹಾಗೂ 17 (ಗುರುವಾರ)ಪರೀಕ್ಷೆ ನಡೆಯಲಿದೆ ಎಂದು ಮಾಹಿತಿ ನೀಡಿದೆ.
ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಜನವರಿ 23 ರಿಂದ ಫೆಬ್ರವರಿ 21ರ ತನಕ ಅರ್ಜಿ ಸಲ್ಲಿಕೆ ಮಾಡಿ ನೋಂದಣಿ ಮಾಡಿಕೊಳ್ಳಬಹುದು. ಇಂಜಿನಿಯರಿಂಗ್, ಪಶು ವೈದ್ಯಕೀಯ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಸಿಇಟಿ ಪರೀಕ್ಷೆಯನ್ನು ನಡೆಸಲಾಗುತ್ತದೆ.
ಉನ್ನತ ಶಿಕ್ಷಣ ಸಚಿವ ಡಾ. ಎಂ. ಸಿ. ಸುಧಾಕರ ಗುರುವಾರ ಸಿಇಟಿ-2025ರ ವೇಳಾಪಟ್ಟಿಯನ್ನು ಪ್ರಕಟಿಸಿದ್ದಾರೆ. 2025ನೇ ಸಾಲಿನ ಸಿಇಟಿ ಪರೀಕ್ಷೆ ಏಪ್ರಿಲ್ 16, 17ರಂದು ನಡೆಯಲಿದೆ. ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.
ಏಪ್ರಿಲ್ 16ರಂದು ಬೆಳಿಗ್ಗೆ 10:30ರಿಂದ ಭೌತವಿಜ್ಞಾನ ಮತ್ತು ಮಧ್ಯಾಹ್ನ 2:30ರಿಂದ ರಸಾಯನ ವಿಜ್ಞಾನ ಪರೀಕ್ಷೆ ನಡೆಯಲಿದೆ. ಏಪ್ರಿಲ್ 17ರಂದು ಬೆಳಿಗ್ಗೆ 10:30ರಿಂದ ಗಣಿತ ಮತ್ತು ಮಧ್ಯಾಹ್ನ 2:30ರಿಂದ ಜೀವವಿಜ್ಞಾನ ವಿಷಯಗಳ ಪರೀಕ್ಷೆಗಳು ನಡೆಯಲಿವೆ. ಏ.18ರಂದು ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ ಎಂದು ಕೆಇಎ ಮಾಹಿತಿ ನೀಡಿದೆ.
ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಉನ್ನತ ಶಿಕ್ಷಣ ಸಚಿವ ಎಂಸಿ ಸುಧಾಕರ್, ‘ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಿಇಟಿ ಪರೀಕ್ಷೆ ವೇಳಾಪಟ್ಟಿಯನ್ನು ನಿಗದಿ ಪಡಿಸಲಾಗಿದೆ. ಇದೆ ಮೊದಲ ಭಾರಿಗೆ ವರ್ಷದಲ್ಲಿ ನಡೆಯುವ ಎಲ್ಲಾ ವೃತ್ತಿಪರ ಕೋರ್ಸುಗಳ ಪ್ರವೇಶ ಪರೀಕ್ಷೆಗಳ ಬಗ್ಗೆ ಒಮ್ಮೆಲೇ ಮಾಹಿತಿ ನೀಡಲಾಗಿದೆ. ವಿದ್ಯಾರ್ಥಿಗಳ ಸಾಧನೆ ಟ್ರ್ಯಾಕಿಂಗ್ ವ್ಯವಸ್ಥೆ, ಹಕ್ಕುಗಳ ಪ್ರಮಾಣಪತ್ರ, ಅರ್ಜಿಯ ಒಟಿಪಿ (OTP) ಪರಿಶೀಲನೆಯನ್ನು ಮತ್ತಷ್ಟು ವ್ಯವಸ್ಥೆಗಳನ್ನು ಭದ್ರತೆ ಮತ್ತು ಸರಳೀಕರಣ ದೃಷ್ಟಿಯಿಂದ ಅಳವಡಿಸಲಾಗಿದೆ.’ ಎಂದು ತಿಳಿಸಿದ್ದಾರೆ.