ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ನಡೆದಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಅವರ ಸಹೋದರ ಚನ್ನರಾಜ್ ಹಟ್ಟಿಹೊಳಿ ಅವರು ಪ್ರಯಾಣಿಸುತ್ತಿದ್ದ ಕಾರು ಅಂಬಡಗಟ್ಟಿ ಬಳಿ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ, ಸಹೋದರ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಹೋಗುತ್ತಿದ್ದ ವೇಳೆ ರಸ್ತೆಯಲ್ಲಿ ನಾಯಿ ಅಡ್ಡ ಬಂದ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿಯಾಗಿದೆ. ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಯಾರಿಗೂ ಗಂಭೀರ ಗಾಯಗಳಾಗಿಲ್ಲ. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಕಾರಿನಲ್ಲಿದ್ದವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಸಿಎಲ್ಪಿ ಸಭೆ ಮುಗಿಸಿ ನಿನ್ನೆ (ಸೋಮವಾರ) ತಡರಾತ್ರಿ ಬೆಂಗಳೂರಿನಿಂದ ಬೆಳಗಾವಿಗೆ ಹೊರಟ್ಟಿದ್ದ ಲಕ್ಷ್ಮೀ ಹೆಬ್ಬಾಳಕರ್ ರಸ್ತೆ ಮಾರ್ಗದ ಮೂಲಕ ಬರುತ್ತಿದ್ದರು. ಅಂಬಡಗಟ್ಟಿ ಗ್ರಾಮದ ಬಳಿ ಅಡ್ಡಬಂದ ನಾಯಿ ತಪ್ಪಿಸಲು ಹೋಗಿ ಮರಕ್ಕೆ ಕಾರು ಡಿಕ್ಕಿಯಾಗಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆನ್ನು, ಮುಖಕ್ಕೆ ಸಣ್ಣಪುಟ್ಟ ಗಾಯವಾಗಿದ್ದು, ಎಂಎಲ್ಸಿ ಚೆನ್ನರಾಜ ಹಟ್ಟಿಹೊಳಿ ತಲೆಗೆ ಗಾಯಯಾಗಿದ್ದು, ಇಂದು ಬೆಳಗಿನಜಾವ 6 ಗಂಟೆ ವೇಳೆಗೆ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಆಸ್ಪತ್ರೆಗೆ ಬೆಳಗಾವಿ ಎಸ್ ಪಿ ಆಗಮಿಸಿದ್ದು, ಸಚಿವೆ ಲಕ್ಷ್ಮಿಹೆಬ್ಬಾಳ್ಕರ್ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಇನ್ನೂ ಅಪಘಾತದ ಸುದ್ದಿ ತಿಳಿದು ಲಕ್ಷ್ಮೀ ಹೆಬ್ಬಾಳ್ಕರ್ ತಾಯಿ ಕೂಡ ಆಸ್ಪತ್ರೆಗೆ ಆಗಮಿಸಿದ್ದು, ಆರೋಗ್ಯ ವಿಚಾರಿಸಿದ್ದಾರೆ. ಇನ್ನೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ ಸುದ್ದಿ ತಿಳಿದು ಗೃಹ ಸಚಿವ ಡಾ ಜಿ ಪರಮೇಶ್ವರ್ ಅವರು ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.
ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಗೆ ಕರೆ ಮಾಡಿದ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆರೋಗ್ಯದ ಬಗ್ಗೆ ವಿಚಾರಿಸಿದ್ದು, ಒಳ್ಳೆಯ ಚಿಕಿತ್ಸೆ ಕೊಡಿಸುವಂತೆ ಹೇಳಿದ್ದಾರೆ.