ಬೆಳಗಾವಿ:
ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಧರಣಿ ಸತ್ಯಾಗ್ರಹ ಕುಳಿತಿದ್ದ ನವ ಕರ್ನಾಟಕ ಎಮ್ ಆರ್ ಡಬ್ಲ್ಯೂ/ವಿ ಆರ್ ಡಬ್ಲ್ಯೂ/ಯು ಆರ್ ಡಬ್ಲ್ಯೂ ವಿಕಲಚೇತನರ ಗೌರವಧನ ಕಾರ್ಯಕರ್ತರನ್ನು ಮಂಗಳವಾರ ಸಂಜೆ ಭೇಟಿ ಮಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಬೇಡಿಕೆಗೆ ಸೂಕ್ತವಾಗಿ ಸ್ಪಂದಿಸುವ ಭರವಸೆ ನೀಡಿದರು. ಈ ಹಿನ್ನೆಲೆಯಲ್ಲಿ ವಿಕಲಚೇತನರು ಧರಣಿ ವಾಪಸ್ ಪಡೆದರು.
ಧರಣಿ ಸ್ಥಳಕ್ಕೆ ತೆರಳಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಅವರ ಬೇಡಿಕೆಗಳ ಕುರಿತು ಸುದೀರ್ಘವಾಗಿ ಚರ್ಚಿಸಿದರು. ರಾಜ್ಯದ 6,860 ಜನ ಎಮ್ ಆರ್ ಡಬ್ಲ್ಯೂ/ವಿ ಆರ್ ಡಬ್ಲ್ಯೂ/ಯು ಆರ್ ಡಬ್ಲ್ಯೂ ವಿಕಲಚೇತನರ ಗೌರವಧನ ಕಾರ್ಯಕರ್ತರ ಹುದ್ದೆಗಳನ್ನು ಖಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಧರಣಿ ನಿರತರು ಸಚಿವರಿಗೆ ಮನವಿ ಸಲ್ಲಿಸಿದರು.
ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಜತೆ ಈ ಕುರಿತು ಚರ್ಚಿಸುತ್ತೇನೆ. ಜೊತೆಗೆ ಬೆಳಗಾವಿಯಲ್ಲಿ ನಡೆಯಲಿರುವ ವಿಧಾನ ಮಂಡಳದ ಅಧಿವೇಶನದ ವೇಳೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿಸುತ್ತೇನೆ ಎಂದು ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದರು. ಬೇಡಿಕೆಗಳಿಗೆ ಸೂಕ್ತವಾಗಿ ಸರಕಾರ ಸ್ಪಂದಿಸಲಿದೆ ಎಂದು ಸಚಿವರು ತಿಳಿಸಿದರು.
ಸಚಿವರು ನಮ್ಮ ಬೇಡಿಕೆಗಳಿಗೆ ಸೂಕ್ತವಾಗಿ ಸ್ಪಂದಿಸಿದ್ದಾರೆ. ಅವರ ಭರವಸೆಯ ಹಿನ್ನೆಲೆಯಲ್ಲಿ ಧರಣಿ ವಾಪಸ್ ಪಡೆಯುತ್ತಿರುವುದಾಗಿ ಸಂಘದ ರಾಜ್ಯ ಅಧ್ಯಕ್ಷ ಫಕೀರ ಗೌಡ ಪಾಟೀಲ ತಿಳಿಸಿದರು.