ವಾಷಿಂಗ್ಟನ್: ಡೊನಾಲ್ಡ್ ಟ್ರಂಪ್ ಅವರು ಅಮೆರಿಕದ 47ನೇ ಅಧ್ಯಕ್ಷರಾಗಿ (ಜ.20-ಸೋಮವಾರ) ಅಧಿಕೃತವಾಗಿ ಅಧಿಕಾರ ಸ್ವೀಕರಿಸಲಿದ್ದು, ಟ್ರಂಪ್ ಪದಗ್ರಹಣ ಸಮಾರಂಭಕ್ಕೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಈ ಮಧ್ಯೆ ಅಧಿಕಾರ ಸ್ವೀಕರಿಸುತ್ತಿದ್ದಂತೇ ಡೊನಾಲ್ಡ್ ಟ್ರಂಪ್ ಅವರು ಚೀನಾ ಮತ್ತು ಭಾರತ ಪ್ರವಾಸ ಕೈಗೊಳ್ಳುವ ಸಾಧ್ಯತೆ ಇದೀಗ ದಟ್ಟವಾಗಿದೆ.ಬೀಜಿಂಗ್ನೊಂದಿಗಿನ ಸಂಬಂಧವನ್ನು ಬಲಪಡಿಸುವ ಪ್ರಯತ್ನದ ಭಾಗವಾಗಿ, ಅಧಿಕಾರ ವಹಿಸಿಕೊಂಡ ನಂತರ ಚೀನಾಕ್ಕೆ ಪ್ರಯಾಣಿಸಲು ಡೊನಾಲ್ಡ್ ಟ್ರಂಪ್ ಮುಂದಾಗಿದ್ದಾರೆ.
ಇದೇ ವೇಳೆ ಭಾರತಕ್ಕೆ ಭೇಟಿ ನೀಡುವ ಕುರಿತು ಸಲಹೆಗಾರರೊಂದಿಗೆ ಮಾತುಕತೆ ನಡೆಸಿದ್ದಾರೆ ಎಂದು ಅಮೆರಿಕದ ಮಾಧ್ಯಮಗಳು ವರದಿ ಮಾಡಿವೆ.”ಡೊನಾಲ್ಡ್ ಟ್ರಂಪ್ ಅವರು ಅಧ್ಯಕ್ಷರಾಗಿ ಆಯ್ಕೆಯಾದ ನಂತರ, ಚೀನಾಕ್ಕೆ ಪ್ರಯಾಣಿಸಲು ಬಯಸಿದ್ದಾರೆ.ಕ್ಸಿ ಜಿನ್ಪಿಂಗ್ ಅವರೊಂದಿಗಿನ ತಮ್ಮ ಸ್ನೇಹ ಸಂಬಂಧವನ್ನು ಮತ್ತಷ್ಟು ಗಾಢವಾಗಿಸಲು ಮುಂದಾಗಿರುವ ಟ್ರಂಪ್, ಚೀನಾ ಪ್ರವಾಸದ ಬಳಿಕ ಭಾರತದತ್ತ ಮುಖ ಮಾಡುವ ಸಾಧ್ಯತೆ ಇದೆ..” ಎಂದು “ವಾಲ್ ಸ್ಟ್ರೀಟ್ ಜರ್ನಲ್” ವರದಿ ಮಾಡಿದೆ.”ಟ್ರಂಪ್ ಅವರು ಭಾರತಕ್ಕೆ ಸಂಭವನೀಯ ಪ್ರವಾಸದ ಬಗ್ಗೆ ಸಲಹೆಗಾರರೊಂದಿಗೆ ಮಾತನಾಡಿದ್ದಾರೆ. ಕಳೆದ ತಿಂಗಳು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಡಾ.ಎಸ್.
ಜೈಶಂಕರ್ ಅವರ ಅಮೆರಿಕ ಪ್ರವಾಸದ ವೇಳೆ ಈ ಕುರಿತು ಪ್ರಾಥಮಿಕ ಹಂತದ ಮಾತುಕತೆಗಳು ನಡೆದಿವೆ..” ಎಂದು “ವಾಲ್ ಸ್ಟ್ರೀಟ್ ಜರ್ನಲ್” ವರದಿಯಲ್ಲಿ ಉಲ್ಲೇಖಿಸಲಾಗಿದೆ.ಭಾರತವು, ಆಸ್ಟ್ರೇಲಿಯಾ, ಜಪಾನ್ ಮತ್ತು ಅಮೆರಿಕವನ್ನು ಒಳಗೊಂಡ ಕ್ವಾಡ್ ಶೃಂಗಸಭೆಯನ್ನು ಆಯೋಜಿಸಲು ಸಿದ್ಧವಾಗಿದೆ. ಈ ಸಭೆಯಲ್ಲಿ ಭಾಗವಹಿಸಲು ಡೊನಾಲ್ಡ್ ಟ್ರಂಪ್ ಭಾರತಕ್ಕೆ ಆಗಮಿಸುವುದು ಖಚಿತವಾಗಿದೆ. ಅದೇ ರೀತಿ ಕ್ವಾಡ್ ಶೃಂಗಸಭೆಗೂ ಮೊದಲು ನಡೆಯಲಿರುವ ಶ್ವೇತಭವನದ ಸಭೆಗೆ, ಟ್ರಂಪ್ ಅವರು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸುವ ಸಾಧ್ಯತೆಯೂ ಇದೆ.ಸದ್ಯ ಟ್ರಂಪ್ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಭರದ ಸಿದ್ಧತೆಗಳು ನಡೆಯುತ್ತಿದ್ದು, ಪ್ರಥಮ ಮಹಿಳೆ ಮೆಲಾನಿಯಾ ಮತ್ತು ಮಗ ಬ್ಯಾರನ್ ಅವರೊಂದಿಗೆ ವಿಶೇಷ ವಿಮಾನದಲ್ಲಿ ಡಲ್ಲೆಸ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಡೊನಾಲ್ಡ್ ಟ್ರಂಪ್ ಬಂದಿಳಿದಿದ್ದಾರೆ.