ದೆಹಲಿ :
ಕೆಲ ತಿಂಗಳಗಳ ಹಿಂದೆಯೇ ಕರ್ನಾಟಕಕ್ಕೆ ಆಗಮಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣೆಯ ರಣಕಹಳೆ ಮೊಳಗಿಸಿದ್ದರು. ಇದೀಗ ಮತ್ತೆ ಅವರು ಆಗಮಿಸಲಿದ್ದಾರೆ.
ಕರ್ನಾಟಕ ವಿಧಾನಸಭಾ ಚುನಾವಣೆ ಇದೀಗ ಕಾವೇರಿದೆ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಅಭ್ಯರ್ಥಿಗಳ ಪ್ರಚಾರ ಇದೀಗ ರಂಗೇರಿದೆ. ಬಿಜೆಪಿಯ ವರ್ಚಸ್ವಿ ಮುಖವಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕರೆತರಲು ಪಕ್ಷ ಮುಂದಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕ ಚುನಾವಣೆಗೆ ರಣಕಹಳೆ ಮೊಳಗಿಸಲು ಆಗಮಿಸಲಿದ್ದಾರೆ.
ರಾಜ್ಯಾದ್ಯಂತ ಸುಮಾರು 20 ಕ್ಕೂ ಹೆಚ್ಚು ಸಭೆ- ಸಮಾರಂಭಗಳಲ್ಲಿ ಮೋದಿ ಮಾತನಾಡಲಿದ್ದಾರೆ. ಸಭೆಯ ಕುರಿತು ಪಕ್ಷದಲ್ಲಿ ಚರ್ಚೆ ನಡೆದಿದೆ. ಒಂದೆರಡು ದಿನಗಳಲ್ಲಿ ಸ್ಪಷ್ಟ ಚಿತ್ರಣ ಹೊರಬೀಳುವ ಸಾಧ್ಯತೆ ಇದೆ. ಈ ಸಲದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ತೀವ್ರ ಪೈಪೋಟಿ ನಡೆದಿದೆ. ಹೀಗಾಗಿ ಮೋದಿ ಅವರನ್ನು ಹೆಚ್ಚು ಹೆಚ್ಚು ಪ್ರಚಾರದಲ್ಲಿ ಬಳಸಿಕೊಳ್ಳಲು ರಾಜ್ಯನಾಯಕರು ತೀರ್ಮಾನಿಸಿದ್ದಾರೆ. ಮೋದಿ ಅವರೊಂದಿಗೆ ರಾಜ್ಯ ಮತದಾರರ ಮೇಲೆ ಪ್ರಭಾವ ಬೀರುವ ಸಾಮರ್ಥ್ಯ ಹೊಂದಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರನ್ನು ಕರೆತಂದು ಪ್ರಚಾರದಲ್ಲಿ ಸಮರ್ಥವಾಗಿ ಬಳಸಿಕೊಳ್ಳಲು ತೀರ್ಮಾನಿಸಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಷಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಯಪ್ರಕಾಶ್ ನಡ್ದಾ ಸೇರಿದಂತೆ ಬಿಜೆಪಿ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ.
ಒಟ್ಟು 10 ದಿನಗಳ ಕಾಲ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕರ್ನಾಟಕ ಚುನಾವಣಾ ಪ್ರಚಾರಕ್ಕೆ ಬಳಸಿಕೊಳ್ಳುವ ಬಗ್ಗೆ ರಾಜ್ಯ ಬಿಜೆಪಿ ರಾಷ್ಟ್ರೀಯ ಘಟಕ ಮತ್ತು ಪ್ರಧಾನಮಂತ್ರಿ ಕಚೇರಿಗೆ ಈಗಾಗಲೇ ಪತ್ರ ಬರೆದಿದೆ.
ಮೇ 6 ರ ಪ್ರಧಾನಿ ಮೋದಿ ಕಾರ್ಯಕ್ರಮ :
ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ಪ್ರಚಾರಕ್ಕೆ ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಮೇ 6 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ. ಮೂಲ್ಕಿ-ಮೂಡುಬಿದಿರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಲ್ಕಿ ಭಾಗದಲ್ಲಿ ಬೃಹತ್ ಚುನಾವಣಾ ಪ್ರಚಾರ ಸಭೆ ಉದ್ದೇಶಿಸಿ ಅವರು ಮಾತನಾಡಲಿದ್ದಾರೆ. ಮೋದಿ ಈ ಕಾರ್ಯಕ್ರಮದ ಮೂಲಕ ಈ ಭಾಗದಲ್ಲಿ ಸಂಚಲನ ಉಂಟು ಮಾಡಲಿದ್ದಾರೆ.
2018 ರಲ್ಲಿಯೂ ಮೋದಿ ಅವರು ಉಡುಪಿಯಲ್ಲಿ ಪ್ರಚಾರ ನಡೆಸಿದ ನಂತರ ಉಭಯ ಜಿಲ್ಲೆಗಳಲ್ಲಿ ಹೆಚ್ಚಿನ ಕ್ಷೇತ್ರಗಳಲ್ಲಿ ಬಿಜೆಪಿ ಜಯಗಳಿಸಿತ್ತು. ಅವರು ಭಾಗವಹಿಸುವ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಲಕ್ಷಾಂತರ ಬಿಜೆಪಿ ಕಾರ್ಯಕರ್ತರು ಆಗಮಿಸಲಿದ್ದಾರೆ ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ.