ಪುಣೆ :
ಕರ್ನಾಟಕದಲ್ಲಿ ಆಡಳಿತರೂಢ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಕಿಡಿ ಕಾರಿದ್ದಾರೆ.
ಕಾಂಗ್ರೆಸ್ ಆಡಳಿತ ಇರುವ ಕರ್ನಾಟಕ ಮತ್ತು ರಾಜಸ್ಥಾನದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿವೆ. ಬೆಂಗಳೂರು ಅಭಿವೃದ್ಧಿಗೆ ಹಣಕಾಸಿನ ಕೊರತೆ ಇದೆ ಎಂಬುದಾಗಿ ಸ್ವತಃ ಕರ್ನಾಟಕ ಸರ್ಕಾರವೇ ಒಪ್ಪಿಕೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಟೀಕಿಸಿದರು.
ನಗರದಲ್ಲಿ ಎರಡು ಮೆಟ್ರೊ ರೈಲುಗಳ ಸಂಚಾರಕ್ಕೆ ಹಸಿರು ನಿಶಾನೆ ತೋರಿದ ಬಳಿಕ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಇದೇ ವೇಳೆ ₹ 15 ಸಾವಿರ ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅವರು ಶಿಲಾನ್ಯಾಸ ನೆರವೇರಿಸಿದರು.
‘ಬೆಂಗಳೂರು ಜಾಗತಿಕ ಹೂಡಿಕೆದಾರರ ನೆಚ್ಚಿನ ತಾಣ. ಐಟಿ ಕೇಂದ್ರ. ಆದರೆ, ರಾಜ್ಯ ಸರ್ಕಾರ ಮಾಡಿರುವ ಕೆಲ ಘೋಷಣೆಗಳ ಕೆಟ್ಟ ಪರಿಣಾಮ ಈಗಾಗಲೇ ಗೊತ್ತಾಗುತ್ತಿದೆ. ತಮ್ಮ ಸ್ವಾರ್ಥಕ್ಕಾಗಿ ಯಾವುದೇ ರಾಜಕೀಯ ಪಕ್ಷವು ರಾಜ್ಯದ ಬೊಕ್ಕಸವನ್ನು ಖಾಲಿ ಮಾಡಿದರೆ, ಜನರು ಸಂಕಷ್ಟ ಎದುರಿಸಬೇಕಾಗುತ್ತದೆ’ ಎಂದರು.
‘ರಾಜಸ್ಥಾನದಲ್ಲಿ ಕೂಡ ಇಂಥದೇ ಪರಿಸ್ಥಿತಿ ನೋಡುತ್ತಿದ್ದೇವೆ. ರಾಜ್ಯದ ಮೇಲೆ ವಿಪರೀತ ಸಾಲದ ಹೊರೆ ಇದ್ದು, ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ‘ ಎಂದು ಮೋದಿ ಟೀಕಿಸಿದರು.