ಬೆಂಗಳೂರು :
ರಾಜ್ಯದ ಕೆಲವು ಭಾಗಗಳಲ್ಲಿ ಮುಂಗಾರು ಪ್ರವೇಶಿಸಿದೆ. ಮುಂದಿನ ಎರಡು ದಿನಗಳಲ್ಲಿ ಕರ್ನಾಟಕದಲ್ಲಿ ಪೂರ್ಣ ಪ್ರಮಾಣದಲ್ಲಿ ಮುಂಗಾರು ಮಳೆ ಸುರಿಯುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರತ್ನಗಿರಿ, ಶಿವಮೊಗ್ಗ, ಹಾಸನ ಧರ್ಮಪುರಿ ಮತ್ತು ಶ್ರೀಹರಿಕೋಟಾ ಮೂಲಕ ಭಾನುವಾರ ಮುಂಗಾರು ಹಾದು ಹೋಗಿದೆ. ಮುಂದಿನ ಎರಡು ದಿನಗಳಲ್ಲಿ ರಾಜ್ಯಕ್ಕೆ ಪೂರ್ಣ ಪ್ರಮಾಣದಲ್ಲಿ ಮುಂಗಾರು ಪ್ರವೇಶಿಸಲಿದೆ. ಬೆಂಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ ಸೇರಿದಂತೆ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಸೋಮವಾರದಿಂದ ಮುಂಗಾರು ಪ್ರವೇಶಿಸುವ ಸಾಧ್ಯತೆಗಳಿವೆ. ಉತ್ತರ ಒಳನಾಡಿನಲ್ಲಿ ಈಗಾಗಲೇ ಮಳೆ ಸುರಿಯುತ್ತಿದೆ. ಇದರ ಪರಿಣಾಮ ಕರಾವಳಿಯಲ್ಲಿ ಹೆಚ್ಚಿನ ಮಳೆಯಾಗಲಿದೆ. ರಾಜ್ಯದಲ್ಲಿ ನೈರುತ್ಯ ದಿಕ್ಕಿನಿಂದ ಗಾಳಿ ಬೀಸುತ್ತಿದೆ. ಸಾಮಾನ್ಯವಾಗಿ ಇದು ಮುಂಗಾರು ಪ್ರವೇಶವಾಗುವ ಮುನ್ನ ಬೀಸುತ್ತದೆ ಎಂದು ಅವಮಾನ ತಜ್ಞ ಪ್ರಸಾದ್ ಮಾಹಿತಿ ನೀಡಿದ್ದಾರೆ.