ಬೆಳಗಾವಿ: ರಾಜ್ಯದ ಆರೋಗ್ಯ ವ್ಯವಸ್ಥೆಯ ಬೆನ್ನೆಲುಬಾಗಿ ಹಗಲಿರುಳು ಶ್ರಮಿಸುತ್ತಿರುವ ಆಶಾ ಕಾರ್ಯಕರ್ತೆಯರು ತಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಹಲವು ದಿನಗಳಿಂದ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದರೂ, ರಾಜ್ಯ ಸರ್ಕಾರ ಕಣ್ಣುಮುಚ್ಚಿ ಕುಳಿತಿರುವುದು ಅತ್ಯಂತ ಖಂಡನೀಯ ಎಂದು ಸಂಸದ ಜಗದೀಶ ಶೆಟ್ಟರ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೋವಿಡ್ ಸಂಕಷ್ಟದ ಸಮಯದಿಂದ ಹಿಡಿದು ಗ್ರಾಮೀಣ ಭಾಗದ ಪ್ರತಿಯೊಂದು ಆರೋಗ್ಯ ಸೇವೆಯನ್ನು ಜನರಿಗೆ ತಲುಪಿಸುವಲ್ಲಿ ಆಶಾ ಕಾರ್ಯಕರ್ತೆಯರ ಪಾತ್ರ ಅಮೂಲ್ಯವಾದುದು. ಆದರೆ, ಇಂದು ತಮ್ಮ ಗೌರವಧನ ಹೆಚ್ಚಳ ಸೇರಿದಂತೆ ಮೂಲಭೂತ ಬೇಡಿಕೆಗಳಿಗಾಗಿ ಚಳಿ-ಮಳೆಯನ್ನು ಲೆಕ್ಕಿಸದೆ ಬೀದಿಗಿಳಿದು ಹೋರಾಟ ನಡೆಸುತ್ತಿರುವ ಮಹಿಳಾ ಕಾರ್ಯಕರ್ತೆಯರ ಅಳಲನ್ನು ಕೇಳುವ ಸೌಜನ್ಯವೂ ಈ ಸರ್ಕಾರಕ್ಕೆ ಇಲ್ಲದಂತಾಗಿದೆ.
ಚುನಾವಣೆಗೂ ಮುನ್ನ ಆಶಾ ಕಾರ್ಯಕರ್ತೆಯರಿಗೆ ಹಲವು ಭರವಸೆಗಳನ್ನು ನೀಡಿದ್ದ ಸರ್ಕಾರ, ಅಧಿಕಾರಕ್ಕೆ ಬಂದ ನಂತರ ಅವುಗಳನ್ನು ಸಂಪೂರ್ಣವಾಗಿ ಮರೆತಿದೆ. ಪ್ರತಿಭಟನಾನಿರತರೊಂದಿಗೆ ಸೌಜನ್ಯಕ್ಕಾದರೂ ಮಾತುಕತೆ ನಡೆಸಿ, ಅವರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಬದಲು ಸರ್ಕಾರ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿರುವುದು ಜನವಿರೋಧಿ ನೀತಿಯಾಗಿದೆ.
ಆಶಾ ಕಾರ್ಯಕರ್ತೆಯರ ಪ್ರತಿಭಟನೆಯಿಂದಾಗಿ ರಾಜ್ಯದ ಗ್ರಾಮೀಣ ಆರೋಗ್ಯ ಸೇವೆಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಆದ್ದರಿಂದ, ರಾಜ್ಯ ಸರ್ಕಾರವು ಕೂಡಲೇ ಪ್ರತಿಷ್ಠೆಯನ್ನು ಬದಿಗಿಟ್ಟು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ, ಆಶಾ ಕಾರ್ಯಕರ್ತೆಯರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ತಕ್ಷಣವೇ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ತೀವ್ರಗೊಳಿಸಬೇಕಾಗುತ್ತದೆ ಎಂದು ಜಗದೀಶ ಶೆಟ್ಟರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.