ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಮುಂದಾಗಿರುವ ಸಿದ್ದರಾಮಯ್ಯ, ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರನ್ನು ಗುರುವಾರ ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸಲು ತೀರ್ಮಾನಿಸಿದ್ದಾರೆ.
ಅದಕ್ಕೂ ಮೊದಲು ತಮ್ಮ ಸರ್ಕಾರಿ ನಿವಾಸ 'ಕಾವೇರಿ'ಯಲ್ಲಿ ಸಂಪುಟ ಸಹೋದ್ಯೋಗಿಗಳಿಗೆ ಅವರು ಉಪಾಹಾರ ಕೂಟ ಆಯೋಜಿಸಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈ ಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ವೇಳೆ, ತಮ್ಮ ರಾಜೀನಾಮೆ ನಿಲುವಿಗೆ ಕಾರಣ ಹಾಗೂ ಹೈಕಮಾಂಡ್ ನಿರ್ಧಾರದ ಬಗ್ಗೆ ಸಿದ್ದರಾಮಯ್ಯ ಅವರು ಸಚಿವರಿಗೆ ಮನವರಿಕೆ ಮಾಡಿಕೊಡುವ ಸಾಧ್ಯತೆಯಿದೆ.
ಮಧ್ಯಾಹ್ನ ರಾಜ್ಯಪಾಲರ ಭೇಟಿಗೆ ಲೋಕಭವನಕ್ಕೆ ತೆರಳಲು ಸಿದ್ದರಾಮಯ್ಯ ಸಮಯ ಕೇಳಿದ್ದಾರೆ ಎಂದು ಮುಖ್ಯಮಂತ್ರಿ ಸಚಿವಾಲಯ ತಿಳಿಸಿದೆ. ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತು ವಿಧಾನಸೌಧದಲ್ಲಿ ಸುದ್ದಿಗಾರರು ಬುಧವಾರ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, 'ಗುರುವಾರ ಎಲ್ಲವನ್ನೂ ಮಾತನಾಡುತ್ತೇನೆ' ಎಂದಷ್ಟೆ ಹೇಳಿದರು.
