ಟ್ರಕ್ ಡಿಕ್ಕಿ ದುರಂತಕ್ಕೆ ಸಿಎಂ ಸಿದ್ದರಾಮಯ್ಯ, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಸೇರಿದಂತೆ ಹಲವಾರು ಮುಖಂಡರು ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸಿದ್ದರಾಮಯ್ಯ, ಹಾಸನದಲ್ಲಿ ಗಣೇಶ ವಿಸರ್ಜನೆಗಾಗಿ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಲಾರಿ ಹರಿದು ಹಲವರು ಸಾವಿಗೀಡಾಗಿ, ಸುಮಾರು 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡ ಸುದ್ದಿ ತಿಳಿದು ಅತೀವ ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಮೃತರ ಕುಟುಂಬಗಳಿಗೆ ಸರ್ಕಾರದ ವತಿಯಿಂದ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು. ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಇದು ಅತ್ಯಂತ ನೋವಿನ ಘಳಿಗೆ. ಅಪಘಾತ ಸಂತ್ರಸ್ತ ಕುಟುಂಬಗಳ ಜೊತೆ ನಾವೆಲ್ಲರೂ ನಿಲ್ಲೋಣ ಎಂದು ಸಿಎಂ ಟ್ವೀಟಿಸಿದ್ದಾರೆ.
ಬೈಕ್ ತಪ್ಪಿಸಲು ಹೋಗಿ ನಡೆಯಿತಾ ಘೋರ ಅಪಘಾತ?
ಟ್ರಕ್ ಅನ್ನು ಭುವನೇಶ್ ಎಂಬಾತ ಓಡಿಸುತ್ತಿದ್ದ ಎನ್ನಲಾಗಿದೆ. ಹಾಸನದಿಂದ ಹೊಳೆನರಸೀಪುರ ಕಡೆಗೆ ಟ್ರಕ್ ಹೋಗುತ್ತಿದ್ದು, ಈ ವೇಳೆ ಬೈಕ್ ಸವಾರ ಅಡ್ಡ ಬಂದಿದ್ದಾನೆ. ಈ ವೇಳೆ ಅಡ್ಡ ಬಂದ ಬೈಕ್ ಸವಾರನನ್ನು ಉಳಿಸಲು ಹೋಗಿ ಜನರು ಸಾಗುತ್ತಿದ್ದ ಗಣೇಶೋತ್ಸವದ ಮೆರವಣಿಗೆ ಮೇಲೆ ಟ್ರಕ್ ನುಗ್ಗಿಸಿದ್ದಾನೆ ಎನ್ನಲಾಗಿದೆ.