Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಚಕ್ರವರ್ತಿ ಸೂಲಿಬೆಲೆ ಸುಳ್ಳಿನ ಚಕ್ರವರ್ತಿ-ಮೊಸರಲ್ಲಿ ಕಲ್ಲು ಹುಡುಕುವುದೇ ಬಿಜೆಪಿಗರ ಕೆಲಸ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಉಡುಪಿ: ವಸತಿ ಯೋಜನೆಯಲ್ಲಿ ಅಲ್ಪಸಂಖ್ಯಾತರಿಗೆ ಶೇಕಡ 5ರಷ್ಟು ಏರಿಕೆ ಮಾಡಿದ್ದು ಕೇಂದ್ರ ಸರ್ಕಾರ. ರಾಜ್ಯ ಸರ್ಕಾರ ಅದಕ್ಕೆ ಒಪ್ಪಿಗೆ ಸೂಚಿಸಿದೆಯಷ್ಟೇ. ಈ ವಿಷಯದಲ್ಲಿ ಬಿಜೆಪಿ ನಾಯಕರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಿಡಿ ಕಾರಿದರು‌.

ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದ ಸಚಿವರು, ರಾಜಕಾರಣ ಮಾಡಲು ಬೇರೆ ವಿಚಾರ ಉಳಿದಿಲ್ಲ. ಮೊದಲು ಗ್ಯಾರಂಟಿ ಯೋಜನೆಗಳನ್ನು ಟೀಕೆ ಮಾಡಿದರು. ಗ್ಯಾರಂಟಿ ಯೋಜನೆಗಳು ಯಶಸ್ವಿ ಆಗುವುದಿಲ್ಲ ಎಂದರು. ನಾವು 136 ಸೀಟು ಗೆದ್ದರೂ ಆರು ತಿಂಗಳು ಸರ್ಕಾರ ಉಳಿಯಲ್ಲ ಎಂದರು, ಜನರ ಭಾವನೆಗಳ ಜೊತೆ ಬಿಜೆಪಿ ಆಟವಾಡುತ್ತದೆ. ಮಾತನಾಡಲು ಅವರಿಗೆ ಬೇರೇನೂ ಉಳಿದಿಲ್ಲ ಎಂದು ದೂರಿದರು.

* *ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸೂಚನೆ
ಈ ವರ್ಷ ವಾಡಿಕೆಗಿಂತ ಹೆಚ್ಚಿನ ಮಳೆಯಾಗುವ ಲಕ್ಷಣ ಇದೆ.‌ ಹೀಗಾಗಿ ಮಳೆ ಅವಾಂತರ ನಿಯಂತ್ರಿಸಲು ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ. ಯಾವುದೇ ಪ್ರಮಾಣದಲ್ಲಿ ಮಳೆ ಬಂದರೂ ನಾವು ಸಿದ್ಧವಾಗಿದ್ದೇವೆ ಎಂದು ಸಚಿವರು ಹೇಳಿದರು.

* *ಸೂಲಿಬೆಲೆ ಸುಳ್ಳಿನ ಚಕ್ರವರ್ತಿ
ಕುಂದಾಪುರದಲ್ಲಿ ಚಕ್ರವರ್ತಿ ಸೂಲಿಬೆಲೆ ಉಪನ್ಯಾಸಕ್ಕೆ ಎನ್ಎಸ್ ಯುಐ ಅಕ್ಷೇಪ ವ್ಯಕ್ತಪಡಿಸಿರುವ ಕುರಿತು ಪ್ರತಿಕ್ರಿಯಿಸಿದ ಸಚಿವರು, ಚಕ್ರವರ್ತಿ ಸೂಲಿಬೆಲೆ ಸುಳ್ಳಿನ ಚಕ್ರವರ್ತಿ. ಬಾಯಿ ತೆರೆದರೆ ರಾಮಾಯಣ, ಭಗವದ್ಗೀತೆ, ಮಹಾಭಾರತ ಹೇಳುತ್ತಾರೆ. ಆದರೆ ಯಾವ ಪ್ರಮಾಣದಲ್ಲಿ ಸುಳ್ಳು ಹೇಳುತ್ತಾರೆ ಅನ್ನೋದು ಇಡೀ ಕರ್ನಾಟಕಕ್ಕೆ ಗೊತ್ತು ಎಂದರು.

ಕಪ್ಪಗಿರುವುದನ್ನು ಬೆಳ್ಳಗೆ ಮಾಡುವುದರಲ್ಲಿ, ಬೆಳ್ಳಗೆ ಇರುವುದನ್ನು ಕಪ್ಪು ಮಾಡುವುದರಲ್ಲಿ ನಿಸ್ಸೀಮರು. ವಾಕ್ ಸ್ವಾತಂತ್ರ್ಯ ಸೇರಿದಂತೆ ಎಲ್ಲಾ ರೀತಿಯ ಸ್ವಾತಂತ್ರ್ಯವನ್ನು ಕಾಂಗ್ರೆಸ್ ಪಕ್ಷ ಕೊಟ್ಟಿದೆ. ಇಡೀ ದೇಶದ ಇತಿಹಾಸದಲ್ಲಿ ಸಂವಿಧಾನವನ್ನು ಎತ್ತಿ ಹಿಡಿದ ಪಕ್ಷ ಕಾಂಗ್ರೆಸ್ ಎಂದು ಸಚಿವರು ಹೇಳಿದರು.

ನಾವು ಚಕ್ರವರ್ತಿ ಸೂಲಿಬೆಲೆ ಅವರಿಂದ ಪಾಠ ಕೇಳಬೇಕಾಗಿಲ್ಲ. ಮೂರು ದಿನ ಉಡುಪಿ ಜಿಲ್ಲೆಯಲ್ಲಿ ಸೂಲಿಬೆಲೆ ಇರುವ ವಿಚಾರ ಪೊಲೀಸ್ ವರಿಷ್ಠಾಧಿಕಾರಿಗಳಿಂದ ತಿಳಿಯಿತು. ಖಂಡಿತವಾಗಿ ಸೂಲಿಬೆಲೆ ತಮ್ಮ ಪ್ರವಾಸ ಮಾಡಬಹುದು. ದ್ವೇಷದ ಭಾಷಣ, ಸುಳ್ಳು ಬಿತ್ತುವ ಕೆಲಸ, ವಿಷ ಬೀಜ ಬಿತ್ತುವ ಕೆಲಸ ಮಾಡದಿರಲಿ. ಯಾಕೆಂದರೆ ಉಡುಪಿ ಶಾಂತಿ ಪ್ರಿಯರ ಜಿಲ್ಲೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

* *ಬಿಜೆಪಿ ಶಾಸಕರ ಆಕ್ಷೇಪಕ್ಕೆ ಸಚಿವರ ತಿರುಗೇಟು

ಒಂದು ಕಡೆ ಬಿಜೆಪಿ ಕೋಮುವಾದವನ್ನು ಪ್ರಚೋದನೆ ಮಾಡುತ್ತದೆ. ನಾವು ಕೋಮು ಪ್ರಚೋದನೆ ಮಾಡುತ್ತಿಲ್ಲ ಎನ್ನುತ್ತಾರೆ. ಇನ್ನೊಂದು ಕಡೆ ಕೋಮು ನಿಗ್ರಹದಳಕ್ಕೆ ವಿರೋಧ ವ್ಯಕ್ತಪಡಿಸುತ್ತಾರೆ.‌ ಇಂಥ ಮನೋಭಾವನೆಯ ಬಿಜೆಪಿ ಶಾಸಕರನ್ನು ನೋಡಿದರೆ ಅವರ ಮನಸ್ಥಿತಿ ಏನು ಅನ್ನೋದು ಉಡುಪಿಯ ಜನತೆಗೆ ಅರ್ಥವಾಗುತ್ತೆ ಎಂದು ಸಚಿವರು ಜಿಲ್ಲೆಯ ಬಿಜೆಪಿ ಶಾಸಕರ ವಿರುದ್ಧ ಕಿಡಿ ಕಾರಿದರು.

 

ನರೇಗಾ ಅನುದಾನ ವಿಳಂಬದ ಬಗ್ಗೆ ಬಿಜೆಪಿಗರು ಮಾತಾಡಲಿ: ಬಿಜೆಪಿ ನಾಯಕರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸವಾಲು

 

ಉಡುಪಿ: ಗೃಹಲಕ್ಷ್ಮಿ ಯೋಜನೆಯ ಹಣ ಫಲಾನುಭವಿಗಳಿಗೆ ತಲುಪಲು ಒಂದು ತಿಂಗಳು ತಡವಾದರೂ ಟೀಕಿಸುವ ಬಿಜೆಪಿ ನಾಯಕರು, ದುಡಿಯುವ ಕೈಗಳಿಗೆ ಸಿಗುವ ನರೇಗಾ ಅನುದಾನ ನೀಡದ ಕೇಂದ್ರ ಸರ್ಕಾರದ ವಿರುದ್ಧ ಮಾತಾಡಲಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಗ್ರಹಿಸಿದರು.

ದುಡಿಯುವ ಕೈಗಳಿಗೆ ಹಣ ಸಿಗಲಿ ಎಂಬ ಉದ್ದೇಶದಿಂದ ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಅವರು ನರೇಗಾ ಯೋಜನೆ ಆರಂಭಿಸಿದರು. ಆದರೆ, ಕಳೆದ ಐದು ತಿಂಗಳಿಂದ ನರೇಗಾ ಯೋಜನೆಯಲ್ಲಿ ಕೆಲಸ ಮಾಡುತ್ತಿರುವ ಗುತ್ತಿಗೆ ನೌಕರರಿಗೆ ಸಂಬಳ ಆಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗೃಹಲಕ್ಷ್ಮಿ ಯೋಜನೆ ನಿರಂತರವಾಗಿ ನಡೆಯುತ್ತಿದ್ದು, ಒಂದು ತಿಂಗಳು ಹಣ ಬರುವುದು ತಡವಾದರೂ ಲಕ್ಷ್ಮೀ ಅಕ್ಕ ಗೃಹಲಕ್ಷ್ಮಿ ದುಡ್ ಎಲ್ಲಿ ಅಕ್ಕ ಅಂತಾರೆ, ಕೇಂದ್ರದ ನಾಯಕರೊಂದಿಗೆ ಮಾತನಾಡಿ ಬಿಜೆಪಿ ನಾಯಕರು ನರೇಗಾ ಯೋಜನೆಯ ಹಣ ಬಿಡುಗಡೆ ಮಾಡಿಸಲಿ ಎಂದರು.

ಅಧಿಕಾರಿಗಳು ಫೀಲ್ಡ್ ಗಿಳಿದು ಕೆಲಸ ಮಾಡಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಖಡಕ್ ಸೂಚನೆ

ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಆದೇಶ

ಪಿಪಿಪಿ ಮಾದರಿಯಲ್ಲಿ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿ :

ಉಡುಪಿ ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದ್ದು, ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಮುಂಜಾಗ್ರತೆ ಕ್ರಮಕೈಗೊಳ್ಳಲು ಅಧಿಕಾರಿಗಳು ಫೀಲ್ಡಿಗಿಳಿದು ಕೆಲಸ ಮಾಡಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಉಡುಪಿ ಜಿಲ್ಲಾ ಪಂಚಾಯತ್ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಶುಕ್ರವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವರು, ಕಡಲ ಕೊರೆತ ತಡೆಗಟ್ಟುವ ಸಲುವಾಗಿ 4.50 ಕೋಟಿ ಹಣ ಬಿಡುಗಡೆಯಾಗಿದ್ದು, ಕಾಮಗಾರಿಗಳನ್ನು ತ್ವರಿತಗೊಳಿಸಬೇಕು ಎಂದರು.

ಕಾಪು ತಾಲೂಕಿನ ಹೆಜ್ಮಾಡಿಯಿಂದ ಬೈಂದೂರಿನ ಶಿರೂರುವರೆಗೆ ಕಡಲ ಕೊರೆತ ಸ್ಥಳಗಳನ್ನು ಗುರುತಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲು ಬಂದರು ಇಲಾಖೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

ಮಲ್ಪೆ ಬಂದರು ನಿರ್ವಹಣೆಯನ್ನು ಸೂಕ್ತ ರೀತಿಯಲ್ಲಿ ಮಾಡಬೇಕು. ಸಿಸಿಟಿವಿ ಅಳವಡಿಸಿ, ಭದ್ರತೆಯ ಜೊತೆಗೆ ಸ್ವಚ್ಛತೆಯನ್ನು ಕಾಪಾಡಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಬಂದರು ಇಲಾಖೆ ಅಧಿಕಾರಿಗಳು ಸೂಚನೆ ನೀಡಿದರು.

ಪ್ರವಾಸೋದ್ಯಮ ಹಾಗೂ ಕ್ರೀಡಾಭಿವೃದ್ಧಿಗೆ ವಿಶೇಷ ಕಾಳಜಿ ವಹಿಸಬೇಕು. ಜಿಲ್ಲೆಯೂ ಪ್ರಮುಖ ಪ್ರವಾಸೋದ್ಯಮ ಕೇಂದ್ರವಾಗಿ ಬೆಳೆಯಬೇಕು. ಪ್ರಾಕೃತಿಕವಾಗಿ, ನೈಸರ್ಗಿಕವಾಗಿ ಸುಂದರ ತಾಣವಾಗಿದ್ದು, ಧಾರ್ಮಿಕ ಸ್ಥಳಗಳನ್ನು ಒಳಗೊಂಡಿದೆ, ಹೆಚ್ಚು ಪ್ರವಾಸಿಗರು ಆಕರ್ಷಿಸುವಂತೆ ಮಾಡಬೇಕು. ಅನಧಿಕೃತ ಹೋಂ ಸ್ಟೇಗಳಿಗೆ ಕಡಿವಾಣ ಹಾಕಬೇಕು, ಪ್ರವಾಸಿ ತಾಣಗಳಲ್ಲಿ 18 ವರ್ಷ ಒಳಗಿನ ಮಕ್ಕಳು ಕೆಲಸ ನಿರ್ವಹಿಸದಂತೆ ನೋಡಿಕೊಳ್ಳಬೇಕು. ಪಿಪಿಪಿ ಮಾದರಿಯಲ್ಲಿ ಪ್ರವಾಸೋದ್ಯಮ ಹಾಗೂ ಕ್ರೀಡೆಯ ಅಭಿವೃದ್ಧಿಗೆ ಕ್ರಮಕೈಗೊಳ್ಳಬೇಕು ಎಂದು ಸಚಿವರು ಹೇಳಿದರು.

ಜಿಲ್ಲೆಯಲ್ಲಿ ರೈತರಿಗೆ ಕಳಪೆ ಬೀಜ ಸರಬರಾಜು ಮಾಡಿದ ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸಿ, ಕಠಿಣ ಕ್ರಮ ಕೈಗೊಳ್ಳಬೇಕು. ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಕೃಷಿ ಸಲಕರಣೆಗಳು ಉಡುಪಿ ಜಿಲ್ಲೆಯಲ್ಲಿ ಸರಿಯಾಗಿ ಸರಬರಾಜು ಆಗುತ್ತಿಲ್ಲ. ಇದು ಕೂಡ ಹೆಚ್ಚಾಗಬೇಕು ಎಂದರು.‌

ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪುವಂತೆ ಮಾಡಬೇಕು. ಹೆಚ್ಚು ಆದಾಯ ತರುವ ಹಣ್ಣುಗಳ ಬಗ್ಗೆ ಜನರಿಗೆ ಜಾಗೃತಿ ಮಾಡಿಸಬೇಕು. ಮುಂದಿನ ಸಭೆ ವೇಳೆ ಫೀಲ್ಡ್ ಗಿಳಿದು ಕೆಲಸ ಮಾಡಿದ ಬಗ್ಗೆ ಮಾಹಿತಿ ನೀಡಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆದೇಶಿಸಿದರು.

ರಾಜ್ಯದಲ್ಲಿ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಚಟುವಟಿಕೆಗಳು ಹೆಚ್ಚು ನಡೆಯುತ್ತಿವೆ. ಆದರೆ, ವಸತಿ ಯೋಜನೆಯಲ್ಲಿ ಬರೀ 25 ಮನೆಗಳನ್ನು ಮಂಜೂರು ಮಾಡಲಾಗುತ್ತಿದೆ. ಇತರ ಜಿಲ್ಲೆಗಳಿಗೂ 25 ಮನೆಗಳನ್ನು ನೀಡಲಾಗುತ್ತಿದೆ. ಈ ಸಮಸ್ಯೆಗಳನ್ನು ಪರಿಹರಿಸಲು ಕ್ರಮಕೈಗೊಳ್ಳಲಾಗುವುದು ಎಂದರು.

ವಾರಾಹಿ ನೀರಾವರಿ ಕಾಮಗಾರಿಗಳನ್ನು ಕೈಗೊಳ್ಳಲು, ಐದು ವರ್ಷಗಳ ಹಿಂದೆಯೇ ಭೂಸ್ವಾಧೀನ ಆಗಿದ್ದು, ಇದುವರೆಗೂ ಪರಿಹಾರ ನೀಡಿಲ್ಲ. ಜೊತೆಗೆ ಬೆಳೆ ಬೆಳೆಯಲು ಬಿಟ್ಟಿಲ್ಲ. ಇದರಿಂದ ರೈತರಿಗೆ ತುಂಬಾ ತೊಂದರೆಯಾಗುತ್ತಿದೆ. ಮುಂದಿನ ಸಭೆ ವೇಳೆಗೆ ರೈತರಿಗೆ ಸೂಕ್ತ ಪರಿಹಾರ ನೀಡಿರಬೇಕು, ಡೀಮ್ಡ್ ಫಾರೆಸ್ಟ್ ನಲ್ಲಿ ಕಾಮಗಾರಿಗೆ ಅಗತ್ಯವಿರುವ ಭೂಮಿಗೆ ಅನುಮತಿ ನೀಡಬೇಕು ಎಂದರು.

ಸಾರಿಗೆ, ನೀರಾವರಿ, ಪಶು ಸಂಗೋಪನೆ, ಆರೋಗ್ಯ, ಶಿಕ್ಷಣ ಸೇರಿದಂತೆ ಪ್ರತಿಯೊಂದು ಇಲಾಖೆಗಳ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿದ ಸಚಿವರು, ಸೂಕ್ತ ಉತ್ತರ ನೀಡದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಪ್ರತಿ ಇಲಾಖೆಯ ಸಾಧಕ-ಭಾದಕಗಳ ಕುರಿತು ಚರ್ಚೆ ನಡೆಸಿದರು.

2024-25ನೇ ಸಾಲಿನಲ್ಲಿ ಉಡುಪಿ ಜಿಲ್ಲೆ ಎಸ್ಎಸ್ಎಲ್ಸಿ ವಿಭಾಗದಲ್ಲಿ ರಾಜ್ಯಕ್ಕೆ ದ್ವಿತೀಯ ಹಾಗೂ ಪಿಯುಸಿಯಲ್ಲಿ ಮೊದಲ ಸ್ಥಾನ ಪಡೆಯಲು ಪ್ರಮುಖ ಪಾತ್ರ ವಹಿಸಿದ ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನು ಸಚಿವರು ಸಭೆಯಲ್ಲಿ ಅಭಿನಂದನೆ ಸಲ್ಲಿಸಿದರು.

ಸಭೆಯಲ್ಲಿ ಶಾಸಕರಾದ ಯಶ್ಪಾಲ್ ಸುವರ್ಣ, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಗಂಟಿಹೊಳೆ, ಗುರ್ಮೆ ಸುರೇಶ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ, ಧನಂಜಯ್ ಸರ್ಜಿ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಡಿಎಫ್ಓ ಗಣಪತಿ ಸೇರಿದಂತೆ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ