ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ (ಮೇ 18ರ ವರೆಗೆ) ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದಿನಿಂದ ಮುಂದಿನ ನಾಲ್ಕು ದಿನಗಳ ಕಾಲ ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಾಧ್ಯತೆಯಿದೆ. ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ತುಮಕೂರು, ಕೋಲಾರ, ರಾಮನಗರ, ಹಾಸನ, ಮಂಡ್ಯ, ಮೈಸೂರು ಜಿಲ್ಲೆಗಳ ಕೆಲವು ಕಡೆಗಳಲ್ಲಿ ಪೂರ್ವ ಮುಂಗಾರು ಮಳೆ ಸಕ್ರಿಯವಾಗಲಿದೆ.
ಮೇ 16 ಮತ್ತು 17 ರಂದು ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಅಧಿಕ ಮಳೆ ಆಗಲಿದೆ. ಗಂಟೆಗೆ ಸುಮಾರು 40-50 ಕಿಮೀ ವೇಗದಲ್ಲಿ ಗಾಳಿ ಬೀಸಲಿದ್ದು ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ನಿರ್ದಿಷ್ಟ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ 15 ರಂದು ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ. ಈ ವೇಳೆ ಗಂಟೆಗೆ 40-50 ಕಿ.ಮೀ ವೇಗದಲ್ಲಿ ರಭಸದ ಗಾಳಿ ಬೀಸಲಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮುಂದಿನ 48 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಲಘು ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡು ಭಾಗದಲ್ಲಿ ಮುಂದಿನ 24 ಗಂಟೆಗಳಲ್ಲಿ ವಾತಾವರಣದಲ್ಲಿ ಸಾಕಷ್ಟು ಬದಲಾವಣೆ ಆಗುವ ಸಾಧ್ಯತೆ ಇದೆ ಎಂದು ಅದು ಹೇಳಿದೆ.
