ಬೆಂಗಳೂರು: ಹಾಸನ, ಕೊಡಗು ಸೇರಿದಂತೆ ಕರಾವಳಿ ಹಾಗೂ ಮಲೆನಾಡು ಭಾಗದ ಏಳು ಜಿಲ್ಲೆಗಳಲ್ಲಿ ಆಗಸ್ಟ್ 5ರಿಂದ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಯಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.
ಭಾರತೀಯ ಹವಾಮಾನ ಇಲಾಖೆ ಬಿಡುಗಡೆ ಮಾಡಿರುವ ಮಳೆ ಮಾಹಿತಿ ಪ್ರಕಾರ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿ ಕರ್ನಾಟಕ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಬಿರುಸಾದ ಗಾಳಿಯೊಂದಿಗೆ (ಗಂಟೆಗೆ 30-40 ಕಿ.ಮೀ) ಕೂಡಿದ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡು ಕರ್ನಾಟಕದ ಜಿಲ್ಲೆಗಳಲ್ಲಿ ಬಿರುಸಾದ ಗಾಳಿಯೊಂದಿಗೆ (ಗಂಟೆಗೆ 40-50 ಕಿ.ಮೀ) ಕೂಡಿದ ಸಾಧಾರಣ ಮಳೆ. ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳು. ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಹಾಗೂ ತುಮಕೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬಿರುಸಾದ ಗಾಳಿಯೊಂದಿಗೆ (ಗಂಟೆಗೆ 30-40 ಕಿ.ಮೀ) ಕೂಡಿದ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು ನಗರದಲ್ಲಿ ಮುಂದಿನ 24 ಗಂಟೆಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ.