ಬೆಂಗಳೂರು: ರಾಜ್ಯದ ಹಲವೆಡೆ ಸೋಮವಾರ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, 'ರೆಡ್ ಅಲರ್ಟ್' ನೀಡಿದೆ.
ಹಲವು ಜಿಲ್ಲೆಗಳಲ್ಲಿ ಗಾಳಿ ಸಹಿತ ಜೋರು ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ದಕ್ಷಿಣ ಕನ್ನಡಕ್ಕೆ 'ರೆಡ್ ಅಲರ್ಟ್' ಘೋಷಿಸಿದರೆ, ರಾಯಚೂರು, ಧಾರಾವಾಡ, ಹಾವೇರಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ 'ಆರೆಂಜ್ ಅಲರ್ಟ್' ಘೋಷಿಸಿದೆ.
ಬೀದರ್, ಕಲಬುರ್ಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಗದಗ, ಕೊಪ್ಪಳ, ಬೆಳಗಾವಿ, ತುಮಕೂರು, ಹಾಸನ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಂಭವ ಇದೆ ಎಂದು ಇಲಾಖೆ ತಿಳಿಸಿದೆ.
ಜಿಲ್ಲೆಗಳಲ್ಲಿ ಹಲವೆಡೆ ಗಂಟೆಗೆ 40 ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸಬಹುದು. ಕರಾವಳಿಯಲ್ಲಿ ಪ್ರತಿ ಗಂಟೆಗೆ 50 ರಿಂದ 60 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದ್ದು, ಮೀನುಗಾರರು ಸಮುದ್ರ ಪ್ರದೇಶಗಳಿಗೆ ಇಳಿಯದಂತೆ ಸೂಚಿಸಲಾಗಿದೆ.
ಬೆಂಗಳೂರಿನಲ್ಲಿ ಸಂಜೆ ಮೋಡ ಕವಿದ ವಾತಾವರಣ ಇರಲಿದ್ದು, ಹಲವು ಪ್ರದೇಶಗಳಲ್ಲಿ ಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಇಲಾಖೆ ತಿಳಿಸಿದೆ.