Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮುಡಾ ಹಗರಣ: ಮುಖ್ಯಮಂತ್ರಿ ಸಿದ್ದರಾಮಯ್ಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

ಬೆಂಗಳೂರು: ಮುಡಾ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ತನಿಖೆಗೆ ತಮ್ಮ ವಿರುದ್ಧ ರಾಜ್ಯಪಾಲರು ನೀಡಿರುವ ಅನುಮತಿ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್‌ ಏಕಸದಸ್ಯ ನ್ಯಾಯಪೀಠ ಇಂದು ವಜಾಗೊಳಿಸಿದೆ.

ಮುಖ್ಯಮಂತ್ರಿ ವಿರುದ್ಧವೇ ಎದುರಾದ ಆರೋಪ ಮತ್ತು ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಅನುಮತಿ ನೀಡಿದ ವಿಷಯ ರಾಜ್ಯ ರಾಜಕೀಯದಲ್ಲಿ ಕಂಪನ ಹಾಗೂ ಕೋಲಾಹಲ ಸೃಷ್ಟಿಸಿತ್ತು. ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ, ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್ ನಾಯಕರು ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ನಡೆಸಿದ್ದರು. 'ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ರಾಜ್ಯಪಾಲರು ವರ್ತಿಸುತ್ತಿದ್ದಾರೆ' ಎಂದು ಆರೋಪಿಸಿದ್ದ ಸಚಿವ ಸಂಪುಟ ಸಭೆ, ಅವರಿಗೆ ಧಿಕ್ಕಾರ ಹೇಳುವ ತೀರ್ಮಾನವನ್ನು ಕೈಗೊಂಡಿತ್ತು. 'ಅನುಮತಿ ವಾಪಸ್‌ ಪಡೆಯಬೇಕು' ಎಂದೂ ಸಂಪುಟ ಸಭೆ ಒತ್ತಾಯಿಸಿತ್ತು.

ಸಿದ್ದರಾಮಯ್ಯ ಸಲ್ಲಿಸಿದ್ದ ಈ ರಿಟ್ ಅರ್ಜಿಗೆ ಸಂಬಂಧಿಸಿದಂತೆ ಉಭಯ ಪಕ್ಷಗಳ ದಿಗ್ಗಜ ವಕೀಲರ ವಾದ-ಪ್ರತಿವಾದವನ್ನು ಆಲಿಸಿದ್ದ ನ್ಯಾಯಮೂರ್ತಿ
ಸಿದ್ದರಾಮಯ್ಯ ಸಲ್ಲಿಸಿದ್ದ ಈ ರಿಟ್ ಅರ್ಜಿಗೆ ಸಂಬಂಧಿಸಿದಂತೆ ಉಭಯ ಪಕ್ಷಗಳ ದಿಗ್ಗಜ ವಕೀಲರ ವಾದ-ಪ್ರತಿವಾದವನ್ನು ಆಲಿಸಿದ್ದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠವು ತೀರ್ಪನ್ನು ಇದೇ 12ರಂದು ಕಾಯ್ದಿರಿಸಿತ್ತು.

ಅರ್ಜಿಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಕರ್ನಾಟಕ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ, ಪ್ರಕರಣದ ದೂರುದಾರರಾದ ಟಿ.ಜೆ.ಅಬ್ರಹಾಂ, ಸ್ನೇಹಮಯಿ ಕೃಷ್ಣ ಮತ್ತು ಎಸ್.ಪಿ.ಪ್ರದೀಪ್ ಕುಮಾ‌ರ್ ಅವರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿತ್ತು.

ಅರ್ಜಿದಾರ ಸಿದ್ದರಾಮಯ್ಯ ಪರವಾಗಿ ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಅಭಿಷೇಕ್ ಮನು ಸಿಂಫ್ಟಿ, ರವಿವರ್ಮ ಕುಮಾ‌ರ್ ಮತ್ತು ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪರ ಅಡ್ವಕೇಟ್ ಜನರಲ್ ಕೆ.ಶಶಿಕಿರಣ ಶೆಟ್ಟಿ, ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ರಾ, ಟಿ.ಜೆ.ಅಬ್ರಹಾಂ ಪರ ರಂಗನಾಥ ರೆಡ್ಡಿ, ಸ್ನೇಹಮಯಿ ಕೃಷ್ಣ ಪರ ಸುಪ್ರೀಂ ಕೋರ್ಟ್ ಹಿರಿಯ ವಕೀಲರಾದ ಮಣಿಂದರ್ ಸಿಂಗ್, ಕೆ.ಜಿ.ರಾಘವನ್‌, ಲಕ್ಷ್ಮಿ ಅಯ್ಯಂಗಾರ್, ಎಸ್.ಪಿ.ಪ್ರದೀಪ್ ಕುಮಾರ್ ಪರ ಹಿರಿಯ ವಕೀಲ ಪ್ರಭುಲಿಂಗ ಕೆ.ನಾವದಗಿ ವಾದ ಮಂಡಿಸಿದ್ದರು.

12.07 ಮುಹೂರ್ತ:

ಈ ಕುರಿತಂತೆ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ನ್ಯಾಯಪೀಠ ಮಂಗಳವಾರ ಮಧ್ಯಾಹ್ನ 12.07ಕ್ಕೆ ಪ್ರಕಟಿಸಿತು.

ತೀರ್ಪಿನ ಅಂತಿಮ ಖಂಡಿಕೆಯ ನಿರ್ಧಾರಕ ವಾಕ್ಯಗಳನ್ನು ಮುಕ್ತ ನ್ಯಾಯಾಲಯದಲ್ಲಿ ಉಲ್ಲೇಖಿಸುವ ಮುನ್ನ 'ನಿಶ್ಯಬ್ದ' ಎಂದು ಎಲ್ಲರಿಗೂ ಎಚ್ಚರಿಸಿ ಗಟ್ಟಿಯಾಗಿ ಓದಿದ ನಾಗಪ್ರಸನ್ನ ಅವರು, 'ಕಲಂ 17 ಎ ಅಡಿ ಅನುಮತಿ ಕೋರಿದ್ದು ಸರಿಯಾಗಿದೆ. ಖಾಸಗಿ ದೂರುದಾರರೇ ಅನುಮತಿ ಕೋರಬಹುದು. ಸಚಿವ ಸಂಪುಟದ ಶಿಫಾರಸನ್ನು ರಾಜ್ಯಪಾಲರು ತಿರಸ್ಕರಿಸಿದ್ದು ಸರಿಯಾಗಿದೆ' ಎಂದರು.

'ರಾಜ್ಯಪಾಲರು ತಮ್ಮ ವಿವೇಚನೆ ಬಳಸಿ ಸೂಕ್ತ ತೀರ್ಮಾನವನ್ನೇ ಕೈಗೊಂಡಿದ್ದಾರೆ. ಹಾಗಾಗಿ ಅರ್ಜಿದಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಈ ಅರ್ಜಿಯನ್ನು ವಜಾ ಮಾಡಲಾಗುತ್ತಿದೆ' ಎಂದರು.

ಇದೇ ವೇಳೆ ಸಿದ್ದರಾಮಯ್ಯ ಪರ ಸುಪ್ರೀಂ ಕೋರ್ಟ್ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ತೀರ್ಪಿನ ಅನುಷ್ಠಾನಕ್ಕೆ ತಾತ್ಕಾಲಿಕ ತಡೆ ನೀಡಲು ನ್ಯಾಯಪೀಠಕ್ಕೆ ಮನವಿ ಮಾಡಿದರು. ಆದರೆ, ಈ ಮನವಿಯನ್ನು ಸಾರಾಸಗಟಾಗಿ ತಿರಸ್ಕರಿಸಿದ ನ್ಯಾಯಮೂರ್ತಿಗಳು, 'ಮುಖ್ಯಮಂತ್ರಿಗಳ ಕುಟುಂಬದ ಸದಸ್ಯರು ಈ ಪ್ರಕರಣದಲ್ಲಿ ಫಲಾನುಭವಿಗಳಾಗಿದ್ದಾರೆ. ಹೀಗಾಗಿ, ರಾಜ್ಯಪಾಲರ ಕ್ರಮ ಸೂಕ್ತವಾಗಿದೆ' ಎಂದು ತಿಳಿಸಿದರು.

ಒಟ್ಟು 198 ಪುಟಗಳ ತೀರ್ಪು ಸಾರ್ವಜನಿಕವಾಗಿ ಹೈಕೋರ್ಟ್ ವೆಬ್ ಸೈಟ್‌ನಲ್ಲಿ ಲಭ್ಯವಾಗುವ ನಿರೀಕ್ಷೆಯಿದೆ.

ಈ ತೀರ್ಪಿನಿಂದಾಗಿ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿರುವ ಸಿದ್ದರಾಮಯ್ಯ ವಿರುದ್ಧದ ಖಾಸಗಿ ದೂರಿಗೆ ಸಂಬಂಧಿಸಿದ ವಿಚಾರಣೆಯ ನ್ಯಾಯಿಕ ಪ್ರಕ್ರಿಯೆಗೆ ಇದ್ದ ಮಧ್ಯಂತರ ತಡೆ ಆದೇಶ ತೆರವುಗೊಂಡಿದ್ದು ಮುಂದಿನ ಕಾನೂನು ಪ್ರಕ್ರಿಯೆಗೆ ಚಾಲನೆ ಸಿಕ್ಕಂತಾಗಿದೆ.

ಮುಖ್ಯಮಂತ್ರಿಗಳ ಪತ್ರಿಕಾ ಹೇಳಿಕೆ.....

-ಹೈಕೋರ್ಟ್ ಆದೇಶದ ಅಂಶಗಳನ್ನು ಮಾಧ್ಯಮದ ಮೂಲಕ ತಿಳಿದುಕೊಂಡಿದ್ದೇನೆ.

-ಆದೇಶ ಪ್ರತಿ ಪಡೆದು ಓದಿದ ಬಳಿಕ‌ ಪ್ರತಿಕ್ರಿಯೆ ನೀಡುತ್ತೇನೆ. ನ್ಯಾಯಾಲಯವು ಸೆಕ್ಷನ್ 218 ರ ಅಡಿ ರಾಜ್ಯಪಾಲರು ನೀಡಿದ ಅಭಿಯೋಜನೆಯನ್ನು ನ್ಯಾಯಾಲಯ ಸಂಪೂರ್ಣವಾಗಿ ತಿರಸ್ಕರಿಸಿದೆ.

-ರಾಜ್ಯಪಾಲರ ಆದೇಶದಲ್ಲಿನ ಸೆಕ್ಷನ್ 17 ಎ ಗೆ ಮಾತ್ರ ನ್ಯಾಯಮೂರ್ತಿಗಳು ಸೀಮಿತಗೊಳಿಸಿದ್ದಾರೆ.

-ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ. ಕಾನೂನು ಅಡಿ ಅಂತಹ ತನಿಖೆಗೆ ಅವಕಾಶ ಇದೆಯೋ ಇಲ್ಲವೋ ಎಂಬ ಬಗ್ಗೆ ತಜ್ಞರ ಜೊತೆ ಸಮಾಲೋಚಿಸುತ್ತೇನೆ. ಕಾನೂನು ತಜ್ಞರ ಜೊತೆ ಚರ್ಚಿಸಿ ಹೋರಾಟದ ರೂಪುರೇಷೆ ನಿರ್ಧರಿಸುತ್ತೇನೆ.

-ದೂರುದಾರ ತನ್ನ ದೂರಿನಲ್ಲಿ ಸೆಕ್ಷನ್ 218 ಬಿಎನ್ ಎಸ್ ಎಸ್, 17 ಎ ಮತ್ತು 19 ಪಿಸಿ ಕಾಯಿದೆ ಪ್ರಕಾರ ತನಿಖೆ ಹಾಗೂ ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿದ್ದರು. ಆದರೆ, ರಾಜ್ಯಪಾಲರು ಪ್ರಾಥಮಿಕ ಹಂತದಲ್ಲಿ 19 ಪಿಸಿ ಕಾಯಿದೆ ಪ್ರಕಾರ ಕೇಳಿದ್ದ ಅಭಿಯೋಜನಾ ಅನುಮತಿ‌ ನಿರಾಕರಿಸಿದ್ದರು.

ಈ ದಿನ ಘನ ನ್ಯಾಯಾಲಯ ರಾಜ್ಯಪಾಲರು 218 ಬಿಎನ್ ಎಸ್ ಎಸ್ ಪ್ರಕಾರ ನೀಡಿರುವ ಅಭಿಯೋಜನಾ ಅನುಮತಿಯನ್ನು ಸ್ಪಷ್ಟವಾಗಿ ತಳ್ಳಿ ಹಾಕಿದೆ.

ಮುಂದಿನ ದಿನಗಳಲ್ಲಿ ಸತ್ಯ ಹೊರಬಂದು 17 ಎ ಅಡಿ ನೀಡಿರುವ ತನಿಖೆ ರದ್ದಾಗಲಿದೆ ಎಂಬ ದೃಢ ವಿಶ್ವಾಸ ನನಗಿದೆ.

-ಈ ರಾಜಕೀಯ ಹೋರಾಟದಲ್ಲಿ ರಾಜ್ಯದ ಜನ ನನ್ನ ಹಿಂದೆ ಇದ್ದಾರೆ. ಅವರ ಆಶೀರ್ವಾದವೇ ನನಗೆ ಶ್ರೀರಕ್ಷೆ.

-ಕಾನೂನು ಮತ್ತು ಸಂವಿಧಾನದಲ್ಲಿ ನನಗೆ ನಂಬಿಕೆ ಇದೆ. ಈ ಹೋರಾಟದಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ ಸಿಗಲಿದೆ.

- ಇದು ನರೇಂದ್ರಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಸೇಡಿನ ರಾಜಕೀಯದ ವಿರುದ್ದದ ಹೋರಾಟ.

- ಬಿಜೆಪಿ, ಜೆಡಿಎಸ್ ನ ಈ ಸೇಡಿನ ರಾಜಕೀಯದ ವಿರುದ್ದ ನಮ್ಮ ನ್ಯಾಯಾಂಗದ ಹೋರಾಟ ಮುಂದುವರಿಯಲಿದೆ. ನ್ಯಾಯಾಲಯದ ಮೇಲೆ ನನಗೆ ನಂಬಿಕೆ ಇದೆ.

-ನಮ್ಮ ಪಕ್ಷದ ಎಲ್ಲ ಶಾಸಕರು, ನಾಯಕರು ಮತ್ತು ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಹೈಕಮಾಂಡ್ ನನ್ನ ಪರವಾಗಿ ಭದ್ರವಾಗಿ ನಿಂತಿದ್ದು ಕಾನೂನಿನ ಹೋರಾಟ ಮುಂದುವರಿಸುವಂತೆ ಉತ್ತೇಜನ ನೀಡಿದ್ದಾರೆ

- ನಾನು ಬಡವರ ಪರವಾಗಿದ್ದೇನೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದೇನೆ ಎನ್ನುವ ಕಾರಣಕ್ಕಾಗಿ ನನ್ನ ವಿರುದ್ದ ಬಿಜೆಪಿ, ಜೆಡಿಎಸ್ ರಾಜಕೀಯ ಪ್ರತಿಕಾರಕ್ಕೆ ಇಳಿದಿದೆ.

-ನನ್ನ ೪೦ ವರ್ಷಗಳ ರಾಜಕೀಯ ಜೀವನದುದ್ದಕ್ಕೂ ಇಂತಹ ಸೇಡು, ಸಂಚಿನ ರಾಜಕೀಯವನ್ನು ಎದುರಿಸಿದ್ದೇನೆ ಮತ್ತು ರಾಜ್ಯದ ಜನರ ಆಶೀರ್ವಾದ, ಹಾರೈಕೆಯ ಬಲದಿಂದ ಗೆಲ್ಲುತ್ತಾ ಬಂದಿದ್ದೇನೆ. ಈ ಹೋರಾಟವನ್ನು ಜನತೆಯ ಆಶೀರ್ವಾದದ ಬಲದಿಂದ ಗೆಲ್ಲುತ್ತೇನೆ ಎಂಬ ವಿಶ್ವಾಸ ಇದೆ.

- ಮುಡಾ ಪ್ರಕರಣ ಒಂದು ನೆಪ ಅಷ್ಟೇ. ಬಡವರು ಮತ್ತು ಶೋಷಿತರ ಪರವಾಗಿರುವ ನಮ್ಮ ಸರ್ಕಾರದ ಯೋಜನೆಗಳನ್ನು ನಿಲ್ಲಿಸಬೇಕೆಂಬುದೇ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮುಖ್ಯ ಉದ್ದೇಶ.

- ಮುಡಾ ಪ್ರಕರಣವನ್ನು ಸೃಷ್ಟಿಸಿ, ಅದರ ಮೂಲಕ ಸುಳ್ಳು ಆರೋಪಗಳನ್ನು ಮಾಡುತ್ತಿರುವವರ ಮುಖಗಳನ್ನು ಒಮ್ಮೆ ರಾಜ್ಯದ ಜನತೆ ಸರಿಯಾಗಿ ನೋಡಬೇಕೆಂದು ನಾನು ಮನವಿ ಮಾಡುತ್ತೇನೆ.

- ನನ್ನ ರಾಜೀನಾಮೆ ಕೇಳುತ್ತಿರುವ ಇದೇ ನಾಯಕರು ನಾನು ರಾಜ್ಯದ ಬಡವರು, ಶೋಷಿತರ ಪರವಾಗಿ ಜಾರಿಗೆ ತಂದಿದ್ದ ಯೋಜನೆಗಳನ್ನು ವಿರೋಧಿಸಿದವರೇ ಆಗಿದ್ದಾರೆ.

- ಇದೇ ಬಿಜೆಪಿ, ಜೆಡಿಎಸ್ ನಾಯಕರು ನಾನು ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದಿದ್ದ ಅನ್ನಭಾಗ್ಯ, ಕ್ಷೀರ ಭಾಗ್ಯ, ಕ್ಷೀರ ಧಾರೆ, ವಿದ್ಯಾಸಿರಿ, ಕೃಷಿಭಾಗ್ಯ, ಪಶುಭಾಗ್ಯ, ಇಂದಿರಾ ಕ್ಯಾಂಟೀನ್ ಯೋಜನೆಗಳನ್ನು ವಿರೋಧಿಸಿದ್ದಾರೆ.

-ಇಂದು ನನ್ನ ವಿರುದ್ದ ರಾಜಕೀಯ ಸಂಚು ನಡೆಸುತ್ತಿರುವ ಇದೇ ನಾಯಕರು ಎಸ್ ಸಿ ಎಸ್ ಪಿ/ಟಿಎಸ್‌ ಪಿ ಕಾಯ್ದೆಯನ್ನು ವಿರೋಧಿಸಿದ್ದಾರೆ.

-ಕರ್ನಾಟಕದ ಜನತೆ ಇಲ್ಲಿಯ ವರೆಗೆ ಭಾರತೀಯ ಜನತಾ ಪಕ್ಷಕ್ಕೆ ಸ್ವಂತ ಬಲದಿಂದ ಅಧಿಕಾರಕ್ಕೆ ಬರುವಷ್ಟು ಬಹುಮತ ನೀಡಿಲ್ಲ. ಇಲ್ಲಿಯ ವರೆಗೆ ಬಿಜೆಪಿ ಅನೈತಿಕವಾಗಿ, ದುಡ್ಡಿನ ಬಲದಿಂದ ಆಪರೇಷನ್ ಕಮಲ ನಡೆಸಿ ಅಧಿಕಾರಕ್ಕೆ ಬಂದದ್ದು.

-ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಆಪರೇಷನ್ ಕಮಲಕ್ಕೆ ಅವಕಾಶವೇ ಇಲ್ಲದಂತೆ ನಮ್ಮ ಪಕ್ಷಕ್ಕೆ ೧೩೬ ಸದಸ್ಯರ ಬಲ ನೀಡಿ ಗೆಲ್ಲಿಸಿದರು.

-ಇದರಿಂದ ಹತಾಶೆಗೀಡಾಗಿರುವ ಬಿಜೆಪಿ, ಜೆಡಿಎಸ್ ನಾಯಕರು, ರಾಜಭವನವನ್ನು ದುರ್ಬಳಕೆ ಮಾಡಿಕೊಂಡು ನನ್ನ ವಿರುದ್ದ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ನಮ್ಮ ಸರ್ಕಾರವನ್ನು ಡಿಸ್ಟರ್ಬ್ ಮಾಡುವ ಹುನ್ನಾರ ನಡೆಸಿದೆ.

-ರಾಜಭವನದ ದುರ್ಬಳಕೆ ಮೂಲಕ ವಿರೋಧ ಪಕ್ಷಗಳ ಸರ್ಕಾರವನ್ನು ಹಣಿಯುವ ಸಂಚನ್ನು ನರೇಂದ್ರಮೋದಿ ನೇತೃತ್ವದ ಬಿಜೆಪಿ ದೇಶಾದ್ಯಂತ ನಡೆಸುತ್ತಿದೆ.

-ನನ್ನ ಪ್ರಕರಣದಲ್ಲಿಯೂ ಬಿಜೆಪಿ ಮತ್ತು ಜೆಡಿಎಸ್ ಇದೇ ರೀತಿ ಮುಖಭಂಗ ಅನುಭವಿಸುವುದು ಖಂಡಿತ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ