ಕೊಪ್ಪಳ: ಟ್ಯಾಂಕರ್ ಡಿಕ್ಕಿ ಹೊಡೆದು ನಿಯಂತ್ರಣ ಕಳೆದುಕೊಂಡ ಟ್ರ್ಯಾಕ್ಟರ್ ಸೇತುವೆಯಿಂದ ಕೆಳಗೆ ಬಿದ್ದು ಸಂಭವಿಸಿದ ಭೀಕರ ಅಪಘಾತದಲ್ಲಿ 4 ಕ್ಕೂ ಅಧಿಕ ಮಂದಿ ಮೃತಪಟ್ಟು ಹಲವು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಯ ಗಡಿಯ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಶುಕ್ರವಾರ (ಮೇ.15) ಸಂಭವಿಸಿದೆ.
ರಾಷ್ಟ್ರೀಯ ಹೆದ್ದಾರಿ 50ರ ಹೊಸಪೇಟೆಯ ಟಿ.ಬಿ ಡ್ಯಾಂ (ತುಂಗಭದ್ರಾ ಸೇತುವೆ) ಸಮೀಪ ಈ ದುರ್ಘಟನೆ ಸಂಭವಿಸಿದೆ. ಅತೀ ವೇಗವಾಗಿ ಬಂದ ಟ್ಯಾಂಕರ್ ಎದುರಿನಿಂದ ಚಲಿಸುತ್ತಿದ್ದ ಟ್ರ್ಯಾಕ್ಟರ್‌ಗೆ ಹಿಂದಿನಿಂದ ಬಲವಾಗಿ ಗುದ್ದಿದೆ. ಡಿಕ್ಕಿಯ ರಭಸಕ್ಕೆ ಟ್ರ್ಯಾಕ್ಟರ್ ಸೇತುವೆಯ ಮೇಲಿಂದ ಕೆಳಕ್ಕೆ ಬಿದ್ದಿವೆ. ಈ ಭೀಕರ ಅಪಘಾತದಲ್ಲಿ ಟ್ರ್ಯಾಕ್ಟರ್‌ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರ ಗಾಯಗೊಂಡವರನ್ನು ಹೊಸಪೇಟೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಮುನಿರಾಬಾದ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
