ಬೆಂಗಳೂರು: ಆಂಧ್ರ ಪ್ರದೇಶ ಮತ್ತು ಒಡಿಶಾದ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸೆ. 16ರವರೆಗೆ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಮತ್ತು ದಕ್ಷಿಣ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕೈದು ದಿನ ಮಳೆ ಮತ್ತಷ್ಟು ತೀವ್ರಗೊಳ್ಳಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಬೀದರ, ಯಾದಗಿರಿ, ಕೊಪ್ಪಳ, ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಸೆ. 14ರಂದು ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಒಳನಾಡಿನಲ್ಲಿ ಭಾನುವಾರದಿಂದ ಮಳೆ ಜೋರಾಗಲಿದೆ ಎಂದು ತಿಳಿಸಲಾಗಿದ್ದು, ವಿಜಯಪುರ, ಕಲಬುರಗಿ ಹಾಗೂ ಕೊಪ್ಪಳ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ಉಡುಪಿ, ಹಾವೇರಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ದಾವಣಗೆರೆ, ರಾಮನಗರ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.