ಬೆಂಗಳೂರು: ರಾಜ್ಯದಲ್ಲಿ ಶಾಲೆಗಳು ಜೂನ್ 1(ಸೋಮವಾರ) ರಿಂದ ಆರಂಭವಾಗಲಿವೆ. ಅಂದು ಪೋಷಕ-ಶಿಕ್ಷಕರ ಮಹಾ ಸಭೆ ಏರ್ಪಡಿಸಲಾಗುತ್ತಿದೆ.
ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, 2026-27ನೇ ಸಾಲಿನ ಶೈಕ್ಷಣಿಕ ವರ್ಷದ ಸಿದ್ಧತೆಗಳ ಕುರಿತು ಇಲಾಖೆಯ ಅಧಿಕಾರಿಗಳು ಮತ್ತು ರಾಜ್ಯದ 46,000 ಸರ್ಕಾರಿ ಶಾಲೆಗಳ ಮುಖ್ಯ ಶಿಕ್ಷಕರ ಜತೆ ಶನಿವಾರ ಸಂವಾದ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮುಂದಿನ ಶೈಕ್ಷಣಿಕ ವರ್ಷದ ಆರಂಭದ ದಿನ ಮಕ್ಕಳನ್ನು ಸಿಎಂ ಸಿದ್ದರಾಮಯ್ಯ ಸ್ವಾಗತಿಸುವರು. ನಂತರ ಪೋಷಕ-ಶಿಕ್ಷಕರ ಜತೆಗೆ ನೇರ ಸಂವಾದ ನಡೆಸುವರು. ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಗಳಲ್ಲಿ ಅತ್ಯುತ್ತಮ ಫಲಿತಾಂಶಕ್ಕೆ ಶ್ರಮಿಸಿದ ಶಿಕ್ಷಕರು, ಅಧಿಕಾರಿಗಳನ್ನು ಗೌರವಿಸಲಿದ್ದಾರೆ ಎಂದು ಹೇಳಿದರು.
ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿಯನ್ನು ಗರಿಷ್ಠ ಮಟ್ಟಕ್ಕೆ ಏರಿಸುವುದು ಮೊದಲ ಆದ್ಯತೆಯಾಗಬೇಕು. ಅನುತ್ತೀರ್ಣರಾದ ವಿದ್ಯಾರ್ಥಿಗಳನ್ನು ಗುರುತಿಸಿ, ಮರಳಿ ಶಾಲೆಗೆ ಕರೆತರಬೇಕು. ಬಿಸಿಯೂಟ ಯೋಜನೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಬೇಕು. ಮಕ್ಕಳ ಆರೋಗ್ಯದ ದೃಷ್ಟಿಯಿಂದ ಲೋಪದೋಷಗಳಾಗದಂತೆ ಎಚ್ಚರ ವಹಿಸಬೇಕು. ಶಾಲಾ ಆರಂಭದಲ್ಲೇ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ, ಸಮವಸ್ತ್ರ ಸೇರಿದಂತೆ ಎಲ್ಲಾ ಅಗತ್ಯ ಸಾಮಗ್ರಿಗಳನ್ನು ವಿತರಿಸಲು ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದರು.
