ಬೆಂಗಳೂರು:
2023-24ನೇ ಸಾಲಿನಲ್ಲಿ ಶಾಲಾ ಮಕ್ಕಳ ಅಪೌಷ್ಟಿಕತೆ ನಿವಾರಣೆಗಾಗಿ ರಾಜ್ಯದ ಎಲ್ಲ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 1 ರಿಂದ 8ನೇ ತರಗತಿ ಮಕ್ಕಳಿಗೆ ಪೂರಕ ಪೌಷ್ಟಿಕ ಆಹಾರವಾಗಿ ಬೇಯಿಸಿದ ಮೊಟ್ಟ ಹಾಗೂ ಮೊಟ್ಟೆ ತಿನ್ನದ ಮಕ್ಕಳಿಗೆ ಬಾಳೆಹಣ್ಣು ಅಥವಾ ಶೇಂಗಾ ಚಿಕ್ಕಿ ವಿತರಿಸುವಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.
ಈ ಕುರಿತು ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.
ಮಧ್ಯಾಹ್ನದ ಬಿಸಿಯೂಟದೊಂದಿಗೆ ಮಕ್ಕಳಿಗೆ ಅಪೌಷ್ಟಿಕತೆ ನಿವಾರಣೆಗಾಗಿ ಪೂರಕ ಪೌಷ್ಟಿಕ ಆಹಾರವಾಗಿ ಬೇಯಿಸಿದ ಮೊಟ್ಟೆ ಹಾಗೂ ಬಾಳೆ ಹಣ್ಣು ಅಥವಾ ಶೇಂಗಾ ಚಿಕ್ಕಿ ವಿತರಿಸಬೇಕು. ಮೊದಲ ಹಂತದಲ್ಲಿ ಜೂನ್ 20ರಿಂದ ಪ್ರಾರಂಭಿಸಿ ಜುಲೈ 15ರವರೆಗೆ ಸರ್ಕಾರದ ಮುಂದಿನ ಆದೇಶದ ವರೆಗೆ ವಿತರಿಸಲು ಸೂಚಿಸಿದ್ದಾರೆ.
ರಾಜ್ಯದ 31 ಜಿಲ್ಲೆಗಳಲ್ಲಿ 1 ರಿಂದ 8ನೇ ತರಗತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮಕ್ಕಳಿಗೆ ಶಾಲೆಯ ಮುಖ್ಯ ಶಿಕ್ಷಕರು ಹಿಂದಿನ ಸಾಲಿನ ಮಾರ್ಗಸೂಚಿಯಂತೆ ಎಸ್ಡಿಎಂಸಿ ನೇತೃತ್ವದಲ್ಲಿ ಅಗತ್ಯ ಕ್ರಮ ಕೈಗೊಂಡು, ಪೂರಕ ಪೌಷ್ಟಿಕ ಆಹಾರವನ್ನು ವಿತರಿಸುವಂತೆ ಸೂಚಿಸಲಾಗಿದೆ.