ಬೆಂಗಳೂರು :
ಸೌಜನ್ಯ ಕೊಲೆ ಪ್ರಕರಣ ಹಿನ್ನೆಲೆಯಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಮತ್ತು ಕುಟುಂಬ ಸದಸ್ಯರು, ನ್ಯಾಯಾಂಗ ಹಾಗೂ ಪೊಲೀಸರ ವಿರುದ್ಧ ಅವಹೇಳನಕಾರಿ ಮತ್ತು ನಿಂದನಾತ್ಮಕ ಹೇಳಿಕೆ ನೀಡದಂತೆ ಮಹೇಶ ಶೆಟ್ಟಿ ತಿಮ್ಮರೊಡಿ ಅವರಿಗೆ ನ್ಯಾಯಾಲಯ ನೀಡಿರುವ ಪ್ರತಿಬಂಧಕಾದೇಶ ಉಲ್ಲಂಘನೆ ಆಗದಂತೆ ನೋಡಿಕೊಳ್ಳುವಂತೆ ರಾಜ್ಯ ಸರ್ಕಾರ ಹಾಗೂ ಗೃಹ ಇಲಾಖೆಗೆ ನ್ಯಾಯಾಲಯ ಸೂಚನೆ ನೀಡಿದೆ.
ನ್ಯಾಯಾಲಯದ ಆದೇಶ ಉಲ್ಲಂಘಿಸುತ್ತಿರುವ ಉಜಿರೆಯ ಮಹೇಶ್ ಶೆಟ್ಟಿ ತಿಮರೊಡಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿ ಹೈಕೋರ್ಟ್ ಗೆ ತಕರಾರು ಅರ್ಜಿ ಸಲ್ಲಿಸಲಾಗಿದೆ.
ನ್ಯಾಯಮೂರ್ತಿಯ ಕೆಲಕಾಲ ವಾದ ಆಲಿಸಿದ ನ್ಯಾ. ಕೃಷ್ಣ ದೀಕ್ಷಿತ್ ಅವರ ಪೀಠ ಪ್ರತಿವಾದಿಗಳಾದ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರು, ಬೆಂಗಳೂರು ನಗರ ಪೊಲೀಸ್ ಆಯುಕ್ತರು, ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ, ಬಂಟ್ವಾಳ ಡಿವೈಎಸ್ಪಿ ಮತ್ತು ಬೆಳ್ತಂಗಡಿ, ಧರ್ಮಸ್ಥಳ ಪೊಲೀಸ್ ಠಾಣಾಧಿಕಾರಿಗಳು ಮತ್ತು ಮಹೇಶ್ ಶೆಟ್ಟಿ ತಿಮರೊಡಿ ಅವರಿಗೆ ನೋಟಿಸ್ ಜಾರಿಗೊಳಿಸಿತು.