ಬೆಂಗಳೂರು: ಮನೆಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ಶನಿವಾರ (ಆ.02) ಶಿಕ್ಷೆ ಪ್ರಕಟಿಸಿದ್ದಾರೆ.
ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಶಿಕ್ಷೆ ಪ್ರಕಟಿಸಿದ್ದು, ಪ್ರಜ್ವಲ್ ರೇವಣ್ಣ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ. ಅಲ್ಲದೆ 5 ಲಕ್ಷ ರೂ ದಂಡ ವಿಧಿಸಲಾಗಿದೆ.
ಶಿಕ್ಷೆಯ ಪ್ರಮಾಣ ಪ್ರಕಟ ಮಾಡುವ ಮೊದಲು ನ್ಯಾಯಾಲಯವು ವಾದ- ಪ್ರತಿವಾದ ಆಲಿಸಿತು. ಗರಿಷ್ಠ ಶಿಕ್ಷೆ ವಿಧಿಸಬೇಕೆಂದು ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಬಿಎನ್ ಜಗದೀಶ್ ಮತ್ತು ಅಶೋಕ್ ನಾಯ್ಕ್ ವಾದ ಮಂಡಿಸಿದರೆ, ಶಿಕ್ಷೆಯ ಪ್ರಮಾಣ ಕಡಿಮೆ ಮಾಡುವಂತೆ ಪ್ರಜ್ವಲ್ ಪರ ವಕೀಲೆ ನಳಿನಾ ಮಾಯಗೌಡ ಮನವಿ ಮಾಡಿದ್ದರು.
ಮೈಸೂರು ಜಿಲ್ಲೆಯ ಕೆ.ಆರ್.ನಗರದ 55 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ್ದ ಪ್ರಜ್ವಲ್ ವಿರುದ್ಧ ಬಿಎನ್ಎಸ್ 376 (2) (ಕೆ), 376 (2) (ಎನ್), 354 (ಎ) (ಬಿ) (ಸಿ), 506 ಮತ್ತು 201, ಐಟಿ ಕಾಯ್ದೆ 66(ಇ) ಅಡಿಯಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ದೂರು ದಾಖಲಾಗಿತ್ತು