ಕಠ್ಮಂಡು: ನೇಪಾಳದಲ್ಲಿ ಭುಗಿಲೆದ್ದಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಬೆನ್ನಲ್ಲೇ ಪ್ರಧಾನಿ ಕೆ.ಪಿ ಶರ್ಮಾ ಓಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪ್ರತಿಭಟನೆ ತೀವ್ರವಾಗುತ್ತಿದ್ದಂತೆ ಓಲಿ ದೇಶ ಬಿಟ್ಟು ಪಲಾಯನ ಮಾಡುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ಭ್ರಷ್ಟಾಚಾರ ಆರೋಪದ ಮೇಲೆ ಕಠ್ಮಂಡುವಿನಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಗಳ ಮಧ್ಯೆ ನೇಪಾಳ ಪ್ರಧಾನಿ ಕೆ.ಪಿ. ಶರ್ಮಾ ಓಲಿ ರಾಜೀನಾಮೆ ನೀಡಿದ್ದಾರೆ.
ಎರಡನೇ ದಿನವಾದ ಮಂಗಳವಾರವೂ ಪ್ರತಿಭಟನಾಕಾರರು ಬೀದಿಗಿಳಿದು ಕಮ್ಯೂನಿಷ್ಟ್ (ಮಾರ್ಕಿಸ್ಟ್ ಮತ್ತು ಲೆನಿನಿಸ್ಟ್) ಮತ್ತು ಕಾಂಗ್ರೆಸ್ ಮೈತ್ರಿಕೂಟ ಆಡಳಿತದ ಪ್ರಧಾನಿ ಕೆ.ಪಿ. ಒಲಿ ಅವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಕಲ್ಲುತೂರಾಟ ನಡೆಸಿದ್ದರು. ಮುಂಜಾಗ್ರತಾ ಕ್ರಮವಾಗಿ ರಾಜಧಾನಿ ಕಠ್ಮಂಡು ಸೇರಿದಂತೆ ಹಲವೆಡೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಉದ್ರಿಕ್ತ ಪ್ರತಿಭಟನಾಕಾರರು ನೇಪಾಳ ಅಧ್ಯಕ್ಷ ರಾಮ್ ಚಂದ್ರ ಪೌಡೆಲ್ ಅವರ ನಿವಾಸಕ್ಕೆ ಬೆಂಕಿ ಹಚ್ಚಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಪ್ರತಿಭಟನಾಕಾರರು ಅಧ್ಯಕ್ಷರ ನಿವಾಸದ ಸುತ್ತ ಮುತ್ತಿಗೆ ಹಾಕಿ ನಿವಾಸವನ್ನು ಹಾನಿಗೊಳಿಸುತ್ತಿರುವ ದೃಶ್ಯ ಸೆರೆಯಾಗಿದೆ.