ಬೆಳಗಾವಿ : ಬೆಳಗಾವಿಯಲ್ಲಿಂದು ನಡೆದಿರುವ ಕಾಂಗ್ರೆಸ್ ಪಕ್ಷದ ಮಹಾ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಪಕ್ಷದ ಅಧಿನಾಯಕ ಹಾಗೂ ಸಂಸದ ರಾಹುಲ್ ಗಾಂಧಿ ಗೈರುಹಾಜರಾಗಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಕೆಲ ದಿನಗಳ ಹಿಂದೆ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಬೆಳಗಾವಿ ಅಧಿವೇಶನದ ಶತಮಾನಕ್ಕೆ ರಾಹುಲ್ ಗಾಂಧಿ ಆಗಮಿಸಿದ್ದರು. ಕಾಂಗ್ರೆಸ್ ಪಕ್ಷದ ಯುವ ನಾಯಕರಾಗಿ ಗುರುತಿಸಿಕೊಂಡಿರುವ ಅವರು ಪಕ್ಷದ ಐಕಾನ್ ಅಗಿ ಎಲ್ಲರ ಗಮನ ಸೆಳೆದಿದ್ದಾರೆ. ಬೆಳಗಾವಿ ಕಾರ್ಯಕ್ರಮಕ್ಕೆ ಅವರು ಆಗಮಿಸುತ್ತಾರೆ ಎಂಬ ನಿರೀಕ್ಷೆ ಇತ್ತು, ಆದರೆ ಅವರು ಈ ಕಾರ್ಯಕ್ರಮಕ್ಕೆ ಗೈರು ಹಾಜರಾಗುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಬೆಳಗಾವಿಯಲ್ಲಿ ಸ್ಪಷ್ಟಪಡಿಸಿದ್ದಾರೆ.
ಅನಾರೋಗ್ಯದ ಕಾರಣ ರಾಹುಲ್ ಗಾಂಧಿ ಸಮಾವೇಶದಲ್ಲಿ ಪಾಲ್ಗೊಳ್ಳುತ್ತಿಲ್ಲ. ಆದರೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಂಸದೆ ಪ್ರಿಯಾಂಕಾ ಗಾಂಧಿ ಪಾಲ್ಗೊಳ್ಳಲಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಮಹಾತ್ಮ ಗಾಂಧಿ ಅಧ್ಯಕ್ಷತೆಯಲ್ಲಿ ನಡೆದ 1924ರ ಬೆಳಗಾವಿ ಕಾಂಗ್ರೆಸ್ ಸಮಾವೇಶದ ಶತಮಾನೋತ್ಸವ ಸ್ಮರಣಾರ್ಥವಾಗಿ ಜ.21ರಂದು ಮಧ್ಯಾಹ್ನ 12 ಗಂಟೆಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಬೆಳಗಾವಿಯ ಸಿಪಿಇಡಿ ಮೈದಾನದಲ್ಲಿ ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ’ ಸಮಾವೇಶವನ್ನು ಆಯೋಜಿಸಲಾಗಿದೆ. ಕರ್ನಾಟಕ ಮಾತ್ರವಲ್ಲ ಇಡೀ ದೇಶದ ಕಾಂಗ್ರೆಸ್ ಪಕ್ಷದ ನಾಯಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದು ವಿಶೇಷವಾಗಿದೆ.