ಬೆಂಗಳೂರು : 18 ವರ್ಷದೊಳಗಿನವರು ಇನ್ನು ಮುಂದೆ ದ್ವಿಚಕ್ರ ವಾಹನ ಓಡಿಸುವಂತಿಲ್ಲ. ಈ ನಿಟ್ಟಿನಲ್ಲಿ ಯಾವುದೇ ಪದವಿ ಪೂರ್ವ ಕಾಲೇಜುಗಳಿಗೆ ಮಕ್ಕಳು ದ್ವಿಚಕ್ರ ವಾಹನಗಳಲ್ಲಿ ಬರುತ್ತಿದ್ದಲ್ಲಿ ಅಂತಹ ಕಾಲೇಜುಗಳ ಪ್ರಾಂಶುಪಾಲರಿಗೆ ನೋಟಿಸ್ ನೀಡುವಂತೆ ಸೂಚನೆ ನೀಡಲಾಗಿದೆ.
ರಸ್ತೆ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದರ ಜೊತೆಗೆ ಅಪಘಾತವಲಯಗಳನ್ನು ಗುರುತಿಸಿ ಸೂಚನಾ ಫಲಕಗಳನ್ನು ಅಳವಡಿಸುವಂತೆ ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ದ್ವಿಚಕ್ರ ವಾಹನ ಚಾಲಾಯಿಸುವವರು ಹೆಲ್ಮಟ್ ಕಡ್ಡಾಯವಾಗಿ ಧರಿಸಬೇಕು. ಯುವ ಜನತೆ ಬಹಳ ಲಘುವಾಗಿ ಪರಿಗಣಿಸಬಾರದು ಇದರಿಂದ ಆಗುವ ಅವಘಡಗಳನ್ನು ತಡೆಯಲು ಅಧಿಕಾರಿಗಳು ಕ್ರಮವಹಿಸಬೇಕು ಎಂದರಲ್ಲದೆ, 18 ವರ್ಷದೊಳಗಿನ ಮಕ್ಕಳು ದ್ವಿಚಕ್ರ ವಾಹನಗಳನ್ನು ಚಾಲನೆ ಮಾಡುವಂತಿಲ್ಲ ಈ ನಿಟ್ಟಿನಲ್ಲಿ ಯಾವುದೇ ಪದವಿ ಪೂರ್ವ ಕಾಲೇಜುಗಳಿಗೆ ಮಕ್ಕಳು ದ್ವಿಚಕ್ರ ವಾಹನಗಳಲ್ಲಿ ಬರುತ್ತಿದ್ದಲ್ಲಿ ಅಂತಹ ಕಾಲೇಜುಗಳ ಪ್ರಾಂಶುಪಾಲರಿಗೆ ನೋಟಿಸ್ ನೀಡುವಂತೆ ತಿಳಿಸಿದರು.