ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ತಾಪಮಾನ (Karnataka Weather) ಹೆಚ್ಚಾಗಿದ್ದು, ಮುಂದಿನ 2 ದಿನಗಳಲ್ಲಿ ತಾಪಮಾನ ಇನ್ನಷ್ಟು ಹೆಚ್ಚಾಗಬಹುದು ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಮುಂಬರುವ ದಿನಗಳಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ತಾಪಮಾನ 45 ಡಿಗ್ರಿ ಸೆಲ್ಸಿಯಸ್ಗೆ ಏರುವ ಸಾಧ್ಯತೆಯಿದೆ. ಹೀಗಾಗಿ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಅನಗತ್ಯವಾಗಿ ಹೊರಗೆ ಬರಬೇಡಿ ಹಾಗೂ ಹೆಚ್ಚು ದ್ರವ ಆಹಾರ ಸೇವಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.
ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬಿಸಿಗಾಳಿ ಎಚ್ಚರಿಕೆ ನೀಡಲಾಗಿದೆ. ಅದರ ಜೊತೆಗೆ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯೂ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಒಳನಾಡಿನ ವಿಜಯಪುರ, ಕಲಬುರ್ಗಿ, ಯಾದಗಿರಿ, ಬೆಳಗಾವಿ ಮತ್ತು ಧಾರವಾಡ ಸೇರಿದಂತೆ ಕೆಲವಡೆ ಗುಡುಗು ಸಹಿತ ಮಳೆಯಾಗಬಹುದಾಗಿದ್ದು, ಉಳಿದೆಡೆ ಒಣ ಹವೆಯಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿಯೂ ಗುಡುಗು, ಸಿಡಿಲು ಸಹಿತ ಮಳೆಯಾಗಬಹುದು ಎಂದು ಅದು ತಿಳಿಸಿದೆ.


