ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಅವರು ಇಂದು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದರು.
ಬೆಳಿಗ್ಗೆ ಮುಂಬೈನ ರಾಜಭವನಕ್ಕೆ ತೆರಳಿದ ಅವರು ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಅವರಿಗೆ ರಾಜೀನಾಮೆ ಸಲ್ಲಿಸಿದರು. ಈ ವೇಳೆ ಉಪ ಮುಖ್ಯಮಂತ್ರಿಗಳಾದ ಅಜಿತ್ ಪವಾರ್ ಹಾಗೂ ದೇವೇಂದ್ರ ಫಡಣವೀಸ್ ಅವರು ಹಾಜರಿದ್ದರು.
ಏಕನಾಥ್ ಶಿಂದೆ ಹಾಗೂ ಅಜಿತ್ ಪವಾರ್ ಉಪ ಮುಖ್ಯಮಂತ್ರಿಗಳಾಗಿ ಅಧಿಕಾರ ಸ್ವೀಕರಿಸುವ ಸಾಧ್ಯತೆ ಇದೆ.
ಶಿಂದೆ ಅವರ ರಾಜೀನಾಮೆ ಅಂಗೀಕಾರವಾಗಿದೆ ಎಂದು ರಾಜ್ಯಪಾಲರ ಕಚೇರಿ ತಿಳಿಸಿದೆ.
ಮಹಾರಾಷ್ಟ್ರ ವಿಧಾನಸಭೆ ಚುನಾವಣೆ 2024ರಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಭರ್ಜರಿ ಜಯ ಗಳಿಸಿದೆ. 235 ಸ್ಥಾನಗಳನ್ನು ಗೆದ್ದುಕೊಂಡಿರುವ ಈ ಕೂಟದಿಂದ ಮಹಾರಾಷ್ಟ್ರದ ಮುಂದಿನ ಸಿಎಂ ಆಗಿ 54 ವರ್ಷದ ದೇವೇಂದ್ರ ಫಡಣವೀಸ್ ಎಂಬುದು ಈಗಾಗಲೇ ಮೈತ್ರಿಕೂಟದಲ್ಲಿ ನಿರ್ಧಾರವಾಗಿದೆ. ಅಧಿಕೃತ ಘೋಷಣೆಯೊಂದೇ ಬಾಕಿ.
ಈ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಮಹಾ ವಿಕಾಸ್ ಅಘಾಡಿ ಕೇವಲ 49 ಸೀಟುಗಳನ್ನು ಗಳಿಸಿ ತೀವ್ರ ಮುಖಭಂಗ ಅನುಭವಿಸಿದೆ. ಅಷ್ಟೇ ಅಲ್ಲದೇ ಈಗ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಅಧಿಕೃತ ವಿರೋಧ ಪಕ್ಷವೇ ಇಲ್ಲದಂತಾಗಿದೆ.
ಬಿಜೆಪಿ 132, ಶಿವಸೇನಾ ಶಿಂದೆ ಬಣ 57, ಎನ್ಸಿಪಿ ಅಜಿತ್ ಪವಾರ್ ಬಣ 41 ಸ್ಥಾನಗಳನ್ನು ಗೆದ್ದಿವೆ.
ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ, ಶಿವಸೇನೆ ಮತ್ತು ಎನ್ಸಿಪಿ ಒಳಗೊಂಡ ಮಹಾಯುತಿ ಮೈತ್ರಿಕೂಟ ಜಯಭೇರಿ ಬಾರಿಸಿದೆ.