ಕಾರವಾರ : ಉತ್ತರಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಮಳೆಯಿಂದ ಅಂಕೋಲಾ ತಾಲ್ಲೂಕಿನ ವಾಸರಕುದ್ರಿಗೆ ಗ್ರಾಮಪಂಚಾಯತ ಶಿರೂರು ಗ್ರಾಮದಲ್ಲಿ ಭೂಕುಸಿತ ಸಂಭವಿಸಿರುತ್ತದೆ.
ಸದ್ರಿ ಭೂಕುಸಿತದಲ್ಲಿ ಎರಡು ಗ್ಯಾಸ್ ಟ್ಯಾಂಕರ್ ಗಂಗಾವಳಿ ನದಿಯಲ್ಲಿ ಉರುಳಿ ಬಿದ್ದಿದ್ದು, ಸದ್ರಿ ಗ್ಯಾಸ್ ಟ್ಯಾಂಕರ್ ಗಳು ಸೋರಿಕೆಯಾಗುವ ಸಾಧ್ಯತೆಯಿರುವುದರಿಂದ, ನದಿ ದಡದಲ್ಲಿರುವ ಮನೆಗಳಲ್ಲಿ ವಾಸವಿರುವ ಸಾರ್ವಜನಿಕರು/ಕುಟುಂಬಸ್ಥರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವುದು ಅತ್ಯವಶ್ಯಕವಾಗಿರುತ್ತದೆ.
ಅದ್ದರಿಂದ ಸಂಬಂಧಪಟ್ಟ ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಅಡಳಿತಾಧಿಕಾರಿಗಳು,ಕಂದಾಯ ನಿರೀಕ್ಷಕರು ಹಾಗೂ ಸಂಬಂಧಪಟ್ಟ ತಾಲ್ಲೂಕಿನ ತಹಶೀಲ್ದಾರರು, ಸಹಾಯಕ ಆಯುಕ್ತರು ಕೂಡಲೇ ಮುನ್ನೆಚರಿಕೆ ಕ್ರಮವಾಗಿ ನದಿ ದಡದಲ್ಲಿರುವ ಎಲ್ಲಾ ಮನೆಗಳಲ್ಲಿರುವ ಕುಟುಂಬದ ಸದಸ್ಯರನ್ನು ಸುರಕ್ಷಿತ ಸ್ಥಳಗಳಾದ ಕಾಳಜಿ ಕೇಂದ್ರದಲ್ಲಿ ಸ್ಥಳಾಂತರಿಸಿ ಎಲ್ಲಾ ರೀತಿಯ ವ್ಯವಸ್ಥೆ ಮಾಡಲು ಮತ್ತು ಕಟ್ಟುನಿಟ್ಟಿನ ಮುನ್ನೆಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯ ಆದೇಶಿಸಿದ್ದಾರೆ.
ಉತ್ತರಕನ್ನಡ ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ ಗುಡ್ಡ, ನದಿ, ಹಳ್ಳಕೆರೆ ಹತ್ತಿರದಲ್ಲಿ ವಾಸಿಸುತ್ತಿರುವ ಕುಟುಂಬಸ್ಥರನ್ನು ಮತ್ತು ಸಾರ್ವಜನಿಕರನ್ನು ಹಾಗೂ ಜಾನುವಾರುಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವ ಅವಶ್ಯಕತೆ ಇರುತ್ತದೆ.
ಆದ್ದರಿಂದ ಜಿಲ್ಲೆಯ ಸಂಬಂಧಪಟ್ಟ ಎಲ್ಲಾ ತಾಲ್ಲೂಕಿನ ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಆಡಳಿತಾಧಿಕಾರಿಗಳು, ಕಂದಾಯ ನಿರೀಕ್ಷಕರು ಹಾಗೂ ಸಂಬಂಧಪಟ್ಟ ತಾಲ್ಲೂಕಿನ ತಹಶೀಲ್ದಾರರು, ಸಹಾಯಕ ಆಯುಕ್ತರು ಕೂಡಲೇ ಮುನ್ನೆಚರಿಕೆ ಕ್ರಮವಾಗಿ ಗುಡ್ಡ, ನದಿ, ಹಳ್ಳ,ಕರ ದಡದಲ್ಲಿರುವ ಎಲ್ಲಾ ಮನೆಗಳಲ್ಲಿರುವ ಕುಟುಂಬದ ಸದಸ್ಯರನ್ನು ಹಾಗೂ ಜಾನುವಾರುಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿ ಎಲ್ಲಾ ರೀತಿಯ ವ್ಯವಸ್ಥೆ ಮಾಡಲು ಮತ್ತು ಕಟ್ಟುನಿಟ್ಟಿನ ಮುನ್ನೆಚರಿಕೆ ಕ್ರಮಗಳನ್ನು ಕೈಗೊಳ್ಳಲು ಅದೇಶಿಸಿದೆ.
ತಪ್ಪಿದಲ್ಲಿ ಸಂಬಂಧಪಟ್ಟ ಅಧಿಕಾರಿ/ಸಿಬ್ಬಂಧಿಗಳ ಮೇಲೆ ಕಟ್ಟುನಿಟ್ಟಿನ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯ ಆದೇಶಿಸಿದ್ದಾರೆ.