ಬೆಂಗಳೂರು :
ಪಕ್ಷ ವಿರೋಧಿ ಹೇಳಿಕೆ ನೀಡಿರುವ 11 ಜನರಿಗೆ ನೋಟಿಸ್ ನೀಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲು ಹೇಳಿದ್ದಾರೆ.
ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ಕಚೇರಿ ನಡೆದ ಸಭೆ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಪಕ್ಷದ ನಾಯಕರ ವಿರುದ್ಧ ಹೇಳಿಕೆ ನೀಡುವವರಿಗೆ ಪಕ್ಷ ಶಿಸ್ತು ಕ್ರಮ ತೆಗೆದುಕೊಳ್ಳಲು ಮುಂದಾಗಿದೆ. ಪಕ್ಷದ ವಿರುದ್ಧವೇ ಮಾತನಾಡಿರುವ 11 ನಾಯಕರಿಗೆ ನೋಟಿಸ್ ಜಾರಿ ಮಾಡಿದ್ದು, ಪಕ್ಷ ವಿರೋಧಿ ಹೇಳಿಕೆ ಕೊಡದಂತೆ ಸೂಚನೆ ನೀಡಲಾಗಿದೆ ಎಂದರು.
ಪಕ್ಷದ ನಾಯಕರ ಬಗ್ಗೆ, ಪಕ್ಷದ ಬಗ್ಗೆ ಬಹಿರಂಗವಾಗಿ ಹೇಳಿಕೆ ನೀಡುತ್ತಿರುವವರನ್ನು ವೈಯಕ್ತಿಕವಾಗಿ ಕರೆದು ಮಾತನಾಡಲಾಗುವುದು. ಮುಂದೆ ಈ ರೀತಿ ಬಹಿರಂಗವಾಗಿ ಪಕ್ಷ ವಿರೋಧಿ ಹೇಳಿಕೆ ನೀಡದಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು. ಇನ್ನು ಮುಂದೆ ಬಹಿರಂಗ ಹೇಳಿಕೆ ನೀಡದಂತೆ ನೋಟಿಸ್ ನೀಡಿದ್ದು, ಒಂದು ವಾರದೊಳಗೆ ಲಿಖಿತವಾಗಿ ಅವರಿಂದ ಉತ್ತರ ಬಯಸಿದ್ದೇವೆ” ಎಂದರು.
ಪಕ್ಷ ವಿರೋಧಿ ಚಟುವಟಿಕೆಯನ್ನು ಚುನಾವಣೆ ಸಂದರ್ಭದಲ್ಲಿ ನಡೆಸಿದ್ದು, ಅಂಥವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ನಿರ್ಧಾರ ಕೈಗೊಂಡಿದ್ದೇವೆ ಎಂದು ತಿಳಿಸಿದರು.
ವಿರೋಧ ಪಕ್ಷದ ನಾಯಕನ ಆಯ್ಕೆ ವಿಚಾರವಾಗಿ ಪ್ರತಿಕ್ರಿಯಿಸಿ, ಜುಲೈ 7ರಂದು ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಲಿದ್ದು, ಕಲಾಪದ ವೇಳೆಗೆ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.