ಬೆಂಗಳೂರು :
ಅತ್ಯಂತ ಧರ್ಮವಂತರಾಗಿ ಬದುಕುತ್ತಿದ್ದ ಮಹಾತ್ಮಗಾಂಧಿಯನ್ನು ಕೊಂದ ಮನಸ್ಥಿತಿಯೇ ಗೌರಿ ಲಂಕೇಶ್, ದಾಭೋಲ್ಕರ್, ಪನ್ಸಾರೆ, ಎಂ.ಎಂ.ಕಲ್ಬುರ್ಗಿ ಅವರನ್ನು ಕೊಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು.
ಗೌರಿ ಮೆಮೋರಿಯಲ್ ಟ್ರಸ್ಟ್ ಪತ್ರಕರ್ತೆ ಗೌರಿ ಲಂಕೇಶ್ ಸ್ಮರಣಾರ್ಥ ಟೌನ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ “ಸರ್ವಾಧಿಕಾಲದ ಹೊತ್ತಲ್ಲಿ ದೇಶವನ್ನು ಮರುಕಟ್ಟುವ ಕಲ್ಪನೆ” ಕುರಿತ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಹಾತ್ಮಗಾಂಧಿ ಅತ್ಯಂತ ಧರ್ಮನಿರಪೇಕ್ಷತೆಯಿಂದ ಬದುಕನ್ನು ಆಚರಿಸುತ್ತಿದ್ದರು. ಇದನ್ನು ಸಹಿಸಲಾಗದ ಮನಸ್ಥಿತಿ ಅವರನ್ನು ಕೊಂದು ಹಾಕಿದರು. ಗೌರಿ ಲಂಕೇಶ್ ಅವರು ಇಂದು ನಮ್ಮ ಜತೆಗಿಲ್ಲ ಆದರೆ ಅವರ ಅದಮ್ಯ ಚೇತನ ನಮ್ಮ ಜತೆಗಿದೆ ಎಂದರು.
ಮಹಾತ್ಮಗಾಂಧಿ, ಗೌರಿ ಲಂಕೇಶ್ ಮಾತ್ರವಲ್ಲ. ಯಾರ್ಯಾರು ಬಸವಾದಿ ಶರಣರು, ಅಂಬೇಡ್ಕರ್, ಬುದ್ಧರ ವಿಚಾರ ಧಾರೆಗಳನ್ನು ಆಚರಿಸುತ್ತಾ ಜಾತಿ ಅಸಮಾನತೆ, ಧರ್ಮ ಸಂಘರ್ಷವನ್ನು ವಿರೋಧಿಸುತ್ತಾರೋ ಅವರೆಲ್ಲರಿಗೂ ಬೆದರಿಕೆ ಪತ್ರಗಳನ್ನು ಬರೆಯುತ್ತಿದ್ದಾರೆ.
ಸಾಹಿತಿಗಳಿಗೆ ಬೆದರಿಕೆ ಪತ್ರ ಬರೆಯುತ್ತಿರುವ ಕಿಡಿಗೇಡಿಗಳು ಎಷ್ಟೇ ಪ್ರಭಲರಾಗಿದ್ದರೂ, ಅವರ ಹಿಂದೆ ಎಷ್ಟೇ ದೊಡ್ಡ ರಾಜಕೀಯ ಒತ್ತಾಸೆ ಇದ್ದರೂ ಅವರನ್ನು ಬಂಧಿಸಿ ಕಾನೂನು ಕ್ರಮಕ್ಕೆ ಒಪ್ಪಿಸಲಾಗುವುದು ಎಂದು ಭರವಸೆ ನೀಡಿದರು.
ಗೌರಿಯನ್ನು ಕೊಂದ ಆರೋಪಿಗಳಿಗೆ ಶಿಕ್ಷೆ ಆದಾಗ ಮಾತ್ರ ಗೌರಿ ಆತ್ಮಕ್ಕೆ ಶಾಂತಿ ಸಿಗುತ್ತದೆ. ಪೊಲೀಸ್ ಅಧಿಕಾರಿಗಳ ಜತೆ ಈ ಬಗ್ಗೆ ಚರ್ಚೆ ನಡೆಸಿ ಮಾಹಿತಿ ಪಡೆದಿದ್ದೇನೆ. ಸಾವಿರಕ್ಕೂ ಅಧಿಕ ಪುಟಗಳ ಆರೋಪ ಪಟ್ಟಿ ಸಲ್ಲಿಕೆಯಾಗಿ, 500 ಕ್ಕೂ ಹೆಚ್ವು ಸಾಕ್ಷಿಗಳನ್ನು ಪಟ್ಟಿ ಮಾಡಲಾಗಿದೆ. ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ಕೂಡ ವೇಗವಾಗಿ ನಡೆಯುತ್ತಿದೆ ಎನ್ನುವ ಮಾಹಿತಿ ಸಿಕ್ಕಿದೆ. ಹೀಗಾಗಿ ತನಿಖಾ ತಂಡದ ವೃತ್ತಿಪರತೆ ಮತ್ತು ಶ್ರಮ ವ್ಯರ್ಥ ಆಗುವುದಿಲ್ಲ. ಆರೋಪಿಗಳಿಗೆ ಖಂಡಿತಾ ಶಿಕ್ಷೆ ಆಗುತ್ತದೆ ಎನ್ನುವ ಭರವಸೆ ನನಗಿದೆ ಎಂದು ತಿಳಿಸಿದರು.
ಅಖಿಲ ಭಾರತ ರೈತ ಆಂದೋಲನದ ನಾಯಕ ರೈತ ಮುಖಂಡ ರಾಕೇಶ್ ಟಿಕಾಯತ್ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಮಾನವ ಹಕ್ಕು ಹೋರಾಟಗಾರ್ತಿ ತೀಸ್ತಾ ಸೆತಲ್ವಾದ್, ರಾಜಕೀಯ ಕಾರ್ಯಕರ್ತೆ ಏಂಜೆಲಾ ರಂಗದ್, ಬಹುಭಾಷಾ ನಟ ಪ್ರಕಾಶ್ ರೈ, ಕೇರಳ ರಾಜ್ಯದ ಮಾಜಿ ಸಚಿವೆ ಶಾಸಕಿ ಶೈಲಜ ಟೀಚರ್, ಖ್ಯಾತ ಪತ್ರಕರ್ತೆ ಸುಪ್ರಿಯಾ ಶ್ರೀನಾಟೆ, ಮುಸ್ಲಿಂ ಒಕ್ಕೂಟದ ಮುಖಂಡರಾದ ಯಾಸಿನ್ ಮಲ್ಪೆ, ಮಾಜಿ ಸಚಿವ ಆಂಜನೇಯ ಅವರು ತಮ್ಮ ವಿಚಾರ ಮಂಡಿಸಿದರು.
*ಸಿಎಂ ಗೆ ಶೈಲಜಾ ಟೀಚರ್ ಅಭಿನಂದನೆ*
ನಾಡಿನ ಜನರನ್ನು ಜಾತಿ ಆಧಾರದಲ್ಲಿ ವಿಭಜಿಸಿ ಭ್ರಷ್ಟಾಚಾರವನ್ನು ಆಚರಿಸುತ್ತಿದ್ದ ಬಿಜೆಪಿ ಮತ್ತು ಆರ್ ಎಸ್ ಎಸ್ ಸಿದ್ಧಾಂತವನ್ನು ಹೀನಾಯವಾಗಿ ಸೋಲಿಸಿ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ್ದಕ್ಕಾಗಿ ಕೇರಳದ ಮಾಜಿ ಸಚಿವೆ ಶಾಸಕಿ ಶೈಲಜಾ ಟೀಚರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಭಿನಂದಿಸಿದರು.
*ಭಾಷಣದ ಹೈಲೈಟ್ಸ್*
* ಗೌರಿ ಲಂಕೇಶ್ ಸಮಾಜದಲ್ಲಿ ದನಿ ಇಲ್ಲದವರ ದನಿಯಾಗಿದ್ದರು.
* ನಾನು ಮೊದಲ ಬಾರಿ ಮುಖ್ಯಮಂತ್ರಿ ಆಗಿದ್ದಾಗ ಗೌರಿ ನನ್ನನ್ಮು ಹತ್ತಾರು ಬಾರಿ ಭೇಟಿಯಾಗಿದ್ದರು. ಆದರೆ ಒಂದು ಬಾರಿಯೂ ಪತ್ರಿಕೆಗೆ ಸಹಾಯ ಕೇಳಲು, ತನ್ನ ಕುಟುಂಬಕ್ಕೆ ಸಹಾಯ ಕೇಳಲು, ವೈಯುಕ್ತಿಕ ಕೆಲಸಗಳಿಗಾಗಿ ಯಾವತ್ತೂ ಬಂದಿರಲಿಲ್ಲ. ಕೇವಲ ಆದಿವಾಸಿಗಳ, ರೈತರ, ಕಾರ್ಮಿಕರ ಸಮಸ್ಯೆಗಳಿಗಾಗಿ ಪರಿಹಾರ ಕೇಳಲು ಬರುತ್ತಿದ್ದರು.
* ಗೌರಿಯನ್ನು ಕೊಂದವರು ಹೇಡಿಗಳು. ವೈಚಾರಿಕವಾಗಿ ಆಕೆಯನ್ನು ಎದುರಿಸಲಾಗದವರು ಕೊಂದಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.