ಬೆಳಗಾವಿ : ಕೊಲೆ ಆರೋಪದಲ್ಲಿ ಜೈಲು ಸೇರಿರುವ ನಟ ದರ್ಶನ್ ನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಬಗ್ಗೆ ಪೊಲೀಸ್ ಇಲಾಖೆ ತೀರ್ಮಾನ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಕೊಲೆ ಆರೋಪದಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಜೈಲಿನಲ್ಲಿ ವಿಶೇಷ ಸೌಲಭ್ಯ ನೀಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಈಗಾಗಲೇ 9 ಜನರನ್ನು ಅಮಾನತು ಮಾಡಲಾಗಿದೆ. ಪ್ರಕರಣಕ್ಕೆಸಂಬಂಧಿಸಿದಂತೆ ತನಿಖೆ ಕೈಗೊಂಡಿದ್ದು, ವರದಿ ಆಧಾರದ ಮೇಲೆ ತಪ್ಪೆಸಗಿರುವ ಇನ್ನಷ್ಟು ಅಧಿಕಾರಿಗಳನ್ನು ಅಮಾನತು ಮಾಡಲಾಗುವುದು ಎಂದರು.
ವದಂತಿ ಕಾರುಬಾರು :
ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಗೆ ರಾಜಾತಿಥ್ಯ ಒದಗಿಸುತ್ತಿರುವ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿತ್ತು. ದರ್ಶನ್ ಹಾಗೂ ಅವರ ಬೆಂಬಲಿಗರನ್ನು ಬೆಳಗಾವಿ ಹಿಂಡಲಗಾ ಜೈಲಿಗೆ ಕರೆತರುವ ಬಗ್ಗೆ ವದಂತಿ ಹಬ್ಬಿತ್ತು.
ರಾಜ್ಯದಲ್ಲೇ ಹಿಂಡಲಗಾ ಕೇಂದ್ರ ಕಾರಾಗೃಹ ಅತ್ಯಂತ ಹಳೆಯದು. ಭದ್ರತೆ ದೃಷ್ಟಿಯಿಂದಲೂ ಸುರಕ್ಷಿತ ಎನಿಸಿಕೊಂಡಿದೆ. ಹೀಗಾಗಿ ಬೆಳಗಾವಿ ಜೈಲಿಗೆ ದರ್ಶನ್ ಅವರನ್ನು ಕರೆ ತರುವ ಸಾಧ್ಯತೆ ಇದೆ ಎನ್ನಲಾಗಿತ್ತು.
ದರ್ಶನ್ ಅವರನ್ನು ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಸಂಬಂಧ ಬಂಧಿಸಿ ಬೆಂಗಳೂರು ಜೈಲಿನಲ್ಲಿ ಇಡಲಾಗಿದೆ. ಸದ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ವಿಷಯ ಪ್ರಸ್ತಾಪಿಸಿರುವುದರಿಂದ ಬಹುತೇಕ ಅಲ್ಲಿಗೆ ಅವರನ್ನು ರವಾನೆ ಮಾಡುವ ಸಾಧ್ಯತೆ ಹೆಚ್ಚಾಗಿದೆ.