ಧಾರವಾಡ: ನಗರದ ಹಳೇ ಎಪಿಎಂಸಿ ಆವರಣದಲ್ಲಿ ಜಾನುವಾರು ವಿಚಾರದಲ್ಲಿ ಹಿಂದೂ-ಮುಸ್ಲಿಂ ಯುವಕರ ನಡುವೆ ಶುಕ್ರವಾರ ಗಲಾಟೆ ನಡೆದಿದೆ. ಮೂವರಿಗೆ ಪೆಟ್ಟಾಗಿದೆ.
ಧಾರವಾಡ ಹಳೇ ಎಪಿಎಂಸಿಯಲ್ಲಿ ಅಕ್ರಮವಾಗಿ ಕಟ್ಟಿದ್ದ ಹಸುಗಳನ್ನು ರಕ್ಷಣೆ ಮಾಡಲು ಹೋಗಿದ್ದ ಸೋಮಶೇಖರ ಚನ್ನಶೆಟ್ಟಿ, ಇತರರ ಮೇಲೆ ಹಲ್ಲೆ ನಡೆದಿದೆ. ಹಲ್ಲೆ ಮಾಡಿದವರನ್ನು ಶೀಘ್ರವಾಗಿ ಬಂಧಿಸಬೇಕು. ತನಿಖೆ ನಡೆಸಿ ಕ್ರಮ ಜರುಗಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದರು.
ಸೋಮಶೇಖರ ಚನ್ನಶೆಟ್ಟಿ, ಗಣೇಶ, ಅಮಿತ ಎಂಬವರಿಗೆ ಪೆಟ್ಟಾಗಿದೆ. ಚಿಕಿತ್ಸೆ ಪಡೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಹಲ್ಲೆ ನಡೆಸಿರುವ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಧಾರವಾಡ ಉಪ ನಗರ ಪೊಲೀಸ್ ಠಾಣೆ ಎದುರು ವಿಶ್ವ ಹಿಂದೂ ಪರಿಷತ್ ಬಜರಂಗದಳ ಕಾರ್ಯಕರ್ತರು ಹಾಗೂ ಬಿಜೆಪಿ ಮುಖಂಡರು ಶುಕ್ರವಾರ ರಾತ್ರಿ ಪ್ರತಿಭಟನೆ ನಡೆಸಿದರು.
ರಾಜ್ಯದಲ್ಲಿ ಗೋವು ಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದೆ. ಆದರೂ ಗೋವು ಹತ್ಯೆ ಮಾಡಲು ಗೋವುಗಳನ್ನು ಸಾಗಾಟ ಮಾಡಲಾಗುತ್ತಿದೆ. ಪೊಲೀಸರು ಕ್ರಮ ಕೈಗೊಂಡಿಲ್ಲ’ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಮಹಾನಗರ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ ಅವರು ಪ್ರತಿಭಟನಾಕಾರರ ಮನವೊಲಿಸಲು ಯತ್ನಿಸಿದರು.
ಶಾಸಕ ಅರವಿಂದ ಬೆಲ್ಲದ ಅವರು, ಸೋಮಶೇಖರ ಚೆನ್ನಶಟ್ಟಿ ಮೇಲೆ ಹಲ್ಲೆ ನಡೆದಿರುವುದು ಖಂಡನೀಯ. ಎಫ್ಐಆರ್ ದಾಖಲಿಸಿಕೊಂಡು ಶೀಘ್ರವಾಗಿ ಬಂಧಿಸಬೇಕು. ಕ್ರಮ ವಹಿಸದಿದ್ದರೆ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತರಿಗೆ ತಿಳಿಸಿದರು. ನಂತರ ಪ್ರತಿಭಟನಾಕಾರರು ಪ್ರತಿಭಟನೆ ಹಿಂಪಡೆದರು.