ಬೆಂಗಳೂರು: ಶಾಸಕರಾದ ರಮೇಶ ಜಾರಕಿಹೊಳಿ ಮತ್ತು ಬಸನಗೌಡ ಪಾಟೀಲ ಯತ್ನಾಳ ಬಳ್ಳಾರಿಗೆ ಪಾದಯಾತ್ರೆ ನಡೆಸುವ ಬಗ್ಗೆ ನಮ್ಮ ತಕರಾರು ಇಲ್ಲ. ಆದರೆ, ಅವರು ವರಿಷ್ಠರ ಅನುಮತಿ ಪಡೆದು ಪಾದಯಾತ್ರೆ ಮಾಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದರು.
ಪತ್ರಕರ್ತರ ಜೊತೆ ಮಾತನಾಡಿದ ಅವರು, ಉತ್ತರ ಕರ್ನಾಟಕದಲ್ಲಿ ಪಾದಯಾತ್ರೆ ಮಾಡಲು ಕೆಲ ಶಾಸಕರು ನಿರ್ಧರಿಸಿದ್ದಾರೆ. ಇದಕ್ಕೆ ನನ್ನ ಅಭ್ಯಂತರ ಇಲ್ಲ. ಆದರೆ, ಪಕ್ಷದ ಸಂಘಟನೆಗೆ ಪೂರಕವಾಗಿ ಹಾಗೂ ವರಿಷ್ಠರ ಒಪ್ಪಿಗೆ ಪಡೆದುಕೊಂಡು ಪಾದಯಾತ್ರೆ ಮಾಡಬೇಕು ಎಂದು ಹೇಳಿದರು.
ಚನ್ನಪಟ್ಟಣ ಉಪಚುನಾವಣೆ ಕುರಿತು ವರಿಷ್ಠರು ತೀರ್ಮಾನಿಸುತ್ತಾರೆ. ಸ್ಪರ್ಧೆಗೆ ಯೋಗೇಶ್ವರ್ ಆಕಾಂಕ್ಷೆ ವ್ಯಕ್ತಪಡಿಸಿದ್ದರಲ್ಲಿ ತಪ್ಪಿಲ್ಲ. ಅವರಿಗೆ ಅಲ್ಲಿ ಹಿಡಿತ ಇದೆ ಎಂದು ಹೇಳಿದರು.