ಬೆಂಗಳೂರು : ಭಾರಿ ಮಳೆ ಹಿನ್ನೆಲೆಯಲ್ಲಿ ತಹಸೀಲ್ದಾರ್ ಸೂಚನೆ ಮೇರೆಗೆ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಜುಲೈ 16 ರಂದು ಸಾಗರ ತಾಲೂಕಿನ ಅಂಗನವಾಡಿ ಸೇರಿದಂತೆ ಶಾಲಾ- ಕಾಲೇಜುಗಳಿಗೆ ರಜೆ ನೀಡಿ ಸಾಗರ ತಹಸೀಲ್ದಾರ್ ಚಂದ್ರಶೇಖರ ನಾಯಕ್ ಆದೇಶ ಹೊರಡಿಸಿದ್ದಾರೆ. ರಜೆ ಘೋಷಿಸಿರುವ ಹಿನ್ನೆಲೆಯಲ್ಲಿ ಅಂದಿನ ಪಾಠಗಳನ್ನು ಮುಂದಿನ ದಿನಗಳಲ್ಲಿ ಸರಿದೂಗಿಸುವುದು, ಶಿಕ್ಷಕರ ತರಬೇತಿ ಸಭೆಗಳು ಮುಂದುವರಿಯುತ್ತವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಹೊಸನಗರ ಶಾಲಾ- ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಣೆ :
ಹೊಸನಗರ ತಾಲೂಕಿನಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 16 (ಮಂಗಳವಾರ)ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ತಹಸಿಲ್ದಾರ್ ರಶ್ಮಿ ಹಾಲೇಶ್ ಆದೇಶ ಹೊರಡಿಸಿದ್ದಾರೆ. ಹೊಸನಗರ ತಾಲೂಕಿನಲ್ಲಿ ಅತಿ ಹೆಚ್ಚು ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಹಾಸನ ಜಿಲ್ಲೆ :
ಹಾಸನ ಜಿಲ್ಲೆಯಲ್ಲೂ ನಿರಂತರ ಮಳೆಯಾಗುತ್ತಿದ್ದು, ಸಕಲೇಶಪುರ, ಆಲೂರು, ಬೇಲೂರು, ಹಾಸನ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಅನುಮತಿ ಪಡೆದು, ರಜೆ ಘೋಷಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪಾಂಡು ಆದೇಶ ಹೊರಡಿಸಿದ್ದಾರೆ. ಸರ್ಕಾರಿ, ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿದ್ದು, ಜುಲೈ 20 ರಂದು ಸರಿದೂಗಿಸುವಂತೆ ಆದೇಶಿಸಿದ್ದಾರೆ.
ಉತ್ತರ ಕನ್ನಡ :
ಉತ್ತರ ಕನ್ನಡ ಜಿಲ್ಲಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಜುಲೈ16ರಂದು ಉತ್ತರಕನ್ನಡ ಜಿಲ್ಲೆಯ ಕಾರವಾರ,ಅಂಕೋಲಾ,ಕುಮಟಾ, ಹೊನ್ನಾವರ, ಭಟ್ಕಳ ಶಿರಸಿ,ಸಿದ್ದಾಪುರ, ಯಲ್ಲಾಪುರ, ದಾಂಡೇಲಿ ಶಾಲಾ-ಕಾಲೇಜು, ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉತ್ತರಕನ್ನಡ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ.